ADVERTISEMENT

ಶಶಿಕಲಾ ಪ್ರಕರಣ: ವರದಿ ಸಲ್ಲಿಸಲು 2 ವಾರಗಳ ಅವಕಾಶ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2021, 17:12 IST
Last Updated 8 ಅಕ್ಟೋಬರ್ 2021, 17:12 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ವಿ.ಕೆ. ಶಶಿಕಲಾ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ಪಡೆಯಲು ಅಧಿಕಾರಿಗಳಿಗೆ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಎರಡು ವಾರಗಳ ಕಾಲಾವಕಾಶ ನೀಡಿದೆ.

ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಚೆನ್ನೈನ ಕೆ.ಎಸ್.ಗೀತಾ, ‘ಪ್ರಕರಣದ ಬಗ್ಗೆ ಸಾಕಷ್ಟು ಮಾಹಿತಿ ಇದ್ದರೂ ಎಸಿಬಿ ತನಿಖೆ ಪೂರ್ಣಗೊಳಿಸಿಲ್ಲ’ ಎಂದು ಆರೋಪಿಸಿದ್ದರು. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘30 ದಿನಗಳಲ್ಲಿ ವಿಚಾರಣಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ತಪ್ಪಿದರೆ ಮುಂದಿನ ವಿಚಾರಣೆಗೆ ಗೃಹ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗಬೇಕು’ ಎಂದು ಈ ಹಿಂದಿನ ವಿಚಾರಣೆ ವೇಳೆ ಪೀಠ ತಾಕಿತು ಮಾಡಿತ್ತು.

ADVERTISEMENT

ಸರ್ಕಾರದ ಪರ ಹಾಜರಾಗಿದ್ದ ವಕೀಲರು, ‘ಗೃಹ ಇಲಾಖೆ ಕಾರ್ಯದರ್ಶಿ ಅವರೇ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ, ವೈಯಕ್ತಿಕ ಕಾರಣಗಳಿಂದ ಹಾಜರಾಗಲು ಸಾಧ್ಯವಾಗಿಲ್ಲ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.