ADVERTISEMENT

ನೆಹರು ಓಲೇಕಾರ್‌ ಶಿಕ್ಷೆಗೆ ಹೈಕೋರ್ಟ್‌ ತಡೆ

ಜನಪ್ರತಿನಿಧಿಗಳ ಕೋರ್ಟ್ ಆದೇಶ ಅಮಾನತು

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 5:41 IST
Last Updated 4 ಮಾರ್ಚ್ 2023, 5:41 IST
   

ಬೆಂಗಳೂರು: ರಾಜ್ಯ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಮತ್ತು ಸ್ವಜನ ಪಕ್ಷಪಾತದ ಆರೋಪದಡಿ ಹಾವೇರಿಯ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತ್ತಿನಲ್ಲಿ ಇರಿಸಿದ ಹೈಕೋರ್ಟ್‌, ಓಲೇಕಾರ್‌ಗೆ ಜಾಮೀನು‌ ಮಂಜೂರು ಮಾಡಿದೆ.

ನೆಹರು ಓಲೇಕಾರ್‌ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಓಲೇಕಾರ್ ಪರ ವಕೀಲ ಆರ್. ಸ್ವರೂಪ ಆನಂದ್, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ದೂರು ದಾಖಲಿಸಲು ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನಮತಿ ಪಡೆದಿಲ್ಲ. ಆದರೂ, ದೂರನ್ನು ವಿಚಾರಣೆ ನಡೆಸಿ ಅರ್ಜಿದಾರರಿಗೆ ಶಿಕ್ಷೆ ಹಾಗೂ ದಂಡ ವಿಧಿಸಿದ ವಿಚಾರಣಾ ನ್ಯಾಯಾಲಯದ ಕ್ರಮ ಕಾನೂನು ಬಾಹಿರ.‌ ಶಾಸಕರು ಅಪರಾಧಿಕ ಒಳಸಂಚು ರೂಪಿಸಿಲ್ಲ. ಆದ್ದರಿಂದ, ಅವರನ್ನು ದೋಷಿಯಾಗಿ ತೀರ್ಮಾನಿಸಿ ಮತ್ತು ಶಿಕ್ಷೆ ವಿಧಿಸಿ ವಿಚಾರಣಾ ನ್ಯಾಯಾಲಯ ಹೊರಡಿಸಿದ ಆದೇಶ ಅಮಾನತ್ತಿನಲ್ಲಿ ಇರಿಸಬೇಕು. ಅರ್ಜಿದಾರರಿಗೆ ಜಾಮೀನು ಮಂಜೂರು ಮಾಡಬೇಕು’ ಎಂದು ಕೋರಿದರು.

ADVERTISEMENT

ಇದನ್ನು ಪುರಸ್ಕರಿಸಿದ ನ್ಯಾಯಪೀಠ, ನಗರದ 91ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 2023ರ ಫೆಬ್ರುವರಿಯಲ್ಲಿ ಹೊರಡಿಸಿದ್ದ ಎರಡು ವರ್ಷಗಳ ಸಾಧಾರಣ ಜೈಲು ಶಿಕ್ಷೆ ಮತ್ತು ₹ 2 ಸಾವಿರ ದಂಡದ ಆದೇಶವನ್ನು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.

‘ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ ರಾಜ್ಯ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಲಾಗಿದೆ ಮತ್ತು ಸ್ವಜನ ಪಕ್ಷಪಾತ ನಡೆಸಲಾಗಿದೆ’ ಎಂಬ ಆಪಾದನೆಯಡಿ ಓಲೇಕಾರ್ ಶಿಕ್ಷೆಗೆ ಒಳಗಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.