ADVERTISEMENT

ಭೂ ಕಬಳಿಕೆ ಆರೋಪ: ಸಚಿವ ಬೈರತಿ–ಆರ್.ಶಂಕರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

stay

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 16:28 IST
Last Updated 21 ಡಿಸೆಂಬರ್ 2021, 16:28 IST
ಸಚಿವ ಬೈರತಿ ಬಸವರಾಜ್
ಸಚಿವ ಬೈರತಿ ಬಸವರಾಜ್   

ಬೆಂಗಳೂರು: ಭೂ ಕಬಳಿಕೆ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್‌ ಪ್ರಕರಣವೊಂದರಲ್ಲಿ ಆಪಾದಿತರಾಗಿರುವಸಚಿವ ಬೈರತಿ ಬಸವರಾಜ ಮತ್ತು ಆರ್.ಶಂಕರ್ ವಿರುದ್ಧದ ಖಾಸಗಿ ದೂರಿಗೆ ಸಂಬಂಧಿಸಿದಂತೆ 42ನೇ ಎಸಿಎಂಎಂ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಸಚಿವರಾದ ಬೈರತಿ ಬಸವರಾಜ ಮತ್ತು ಆರ್‌. ಶಂಕರ್ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಸುನಿಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿತು.

‘ವಿವಾದಿತಸ್ಥಿರಾಸ್ತಿಗೆ ಸಂಬಂಧಿಸಿದಂತೆ 2012ರಲ್ಲಿಯೇ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು ಮತ್ತು ಅರ್ಜಿದಾರರ ವಿರುದ್ಧ ದಾಖಲಾಗಿರುವ ಖಾಸಗಿ ದೂರನ್ನು ವಿಚಾರಣೆಗೆ ಪರಿಗಣಿಸುವಾಗ,ಅರ್ಜಿದಾರರು ಮತ್ತು ಪ್ರತಿವಾದಿಗಳ ನಡುವೆ ಸಿವಿಲ್ ವ್ಯಾಜ್ಯವಿತ್ತು ಎಂಬ ಅಂಶವನ್ನು ವಿಚಾರಣಾ ನ್ಯಾಯಾಲಯ ಕಡೆಗಣಿಸಿದೆ’ ಎಂದು ನ್ಯಾಯಪೀಠ ಹೇಳಿದೆ.

ADVERTISEMENT

‘ವಿವಾದಿತ ವಿಷಯಕ್ಕೆ ಸಂಬಂಧಿಸಿದಂತೆ ಸಿವಿಲ್ ನ್ಯಾಯಾಲಯ, ವಿಚಾರಣಾ ನ್ಯಾಯಾಲಯ ಮತ್ತು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಹೊರಡಿಸಿರುವ ಆದೇಶವನ್ನು ವಿಚಾರಣಾ ನ್ಯಾಯಾಲಯ ಪರಿಗಣಿಸಿಲ್ಲ. ಆದ್ದರಿಂದ, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಲು ಇದು ಅರ್ಹ ಪ್ರಕರಣವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವನ್ನು ವಿಚಾರಣೆಗೆ ಅಂಗೀಕರಿಸಿ ಸಮನ್ಸ್ ಜಾರಿಗೊಳಿಸಿದ 42ನೇ ಎಸಿಎಂಎಂ ನ್ಯಾಯಾಲಯದ ಆದೇಶ ಮತ್ತು ಪ್ರಕರಣ ಕುರಿತು ಕೆ.ಆರ್.ಪುರ ಪೊಲೀಸರು ಸಲ್ಲಿಸಿದ ‘ಬಿ‘ ರಿಪೋರ್ಟ್ ತಿರಸ್ಕರಿಸಿದ, ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿ ಬೈರತಿ ಬಸವರಾಜ, ಆರ್.ಶಂಕರ್ ಮತ್ತು ಎ.ಎಂ. ಮಾದಪ್ಪ ಈ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ಸಚಿವರ ಪರ ಹಿರಿಯ ವಕೀಲ ಬಿ.ವಿ.ಆಚಾರ್ಯ ಹಾಗೂ ಬಿ.ಎಲ್‌.ಆಚಾರ್ಯ ವಾದ ಮಂಡಿಸಿದರು. ವಿಚಾರಣೆಯನ್ನು 2022ರ ಜನವರಿ ಎರಡನೇ ವಾರಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.