ADVERTISEMENT

ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 17:28 IST
Last Updated 22 ಮಾರ್ಚ್ 2024, 17:28 IST
<div class="paragraphs"><p>ತೇಜಸ್ವಿ ಸೂರ್ಯ</p></div>

ತೇಜಸ್ವಿ ಸೂರ್ಯ

   

ಬೆಂಗಳೂರು: ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದಡಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಪಡಿಸಬೇಕು’ ಎಂದು ಕೋರಿ ತೇಜಸ್ವಿ ಸೂರ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ತೇಜಸ್ವಿ ಸೂರ್ಯ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್, ‘ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಯಾವುದೇ ಪುರಾವೆಗಳಿಲ್ಲ. ವಿನಾಕಾರಣ ಅವರಿಗೆ ತೊಂದರೆ ನೀಡುವ ಉದ್ದೇಶದಿಂದ ರಾಜಕೀಯ ಪ್ರೇರಿತವಾಗಿ ಈ ಪ್ರಕರಣ ದಾಖಲಿಸಲಾಗಿದೆ. ಹಾಗಾಗಿ, ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.