
ಬೆಂಗಳೂರು: ‘ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳನ್ನು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಕಾಯ್ದೆ ಅಡಿ ಬಂಧಿಸುವಾಗ ಅಧಿಕಾರಿಗಳು ಹಳೆಯ ತಪ್ಪುಗಳನ್ನೇ ಮುಂದುವರೆಸುತ್ತಿದ್ದಾರೆ’ ಎಂದು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಹುಬ್ಬಳ್ಳಿಯ ದಾವೂದ್ ನದಾಫ್ ಎಂಬುವರನ್ನು 2025ರ ಜೂನ್ 3ರಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಮುಂಜಾಗ್ರತಾ ಕ್ರಮವಾಗಿ ಬಂಧಿಸಿದ್ದ ಕ್ರಮ ಪ್ರಶ್ನಿಸಿ ಅವರ ಪತ್ನಿ ಪ್ರತಿಭಾ ತಲಪಾಟಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ನೇತೃತ್ವದ ವಿಭಾಗೀಯ ನ್ಯಾಯಪೀಠ (ಧಾರವಾಡ) ಪೊಲೀಸ್ ಇಲಾಖೆಯ ಕ್ರಮಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದೆ.
‘ಅಧಿಕಾರಿಗಳ ಸಣ್ಣಪುಟ್ಟ ತಪ್ಪುಗಳಿಂದಾಗಿ ಎದುರಾಗುವ ತಾಂತ್ರಿಕ ಕಾರಣಗಳ ಆಧಾರದಲ್ಲಿ ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವಂತಹ ಅರೋಪಿಗಳ ಬಿಡುಗಡೆಗೆ ಆದೇಶಿಸಬೇಕಾಗುತ್ತದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಮುಂಜಾಗ್ರತಾ ಕ್ರಮವಾಗಿ ಬಂಧನದ ಆದೇಶ ಹೊರಡಿಸುವುದಕ್ಕೆ ಸಂಬಂಧಿಸಿದಂತೆ ನೀಡಲಾಗಿರುವ ಮಾರ್ಗಸೂಚಿಗಳನ್ನು ಸರ್ಕಾರದ ಸಂಬಂಧಿಸಿದ ಇಲಾಖೆಗಳಿಗೆ ರವಾನಿಸುವಂತೆ ನ್ಯಾಯಪೀಠ ಇದೇ ವೇಳೆ ನಿರ್ದೆಶಿಸಿದೆ.
ಗೂಂಡಾ ಕಾಯ್ದೆಯಡಿ ಬಂಧಿಸುವಾಗ 13 ಅಂಶಗಳ ಮಾರ್ಗಸೂಚಿ ಪಾಲನೆ ಮಾಡುವಂತೆ ಹೈಕೋರ್ಟ್ 2019ರಲ್ಲಿ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.