ADVERTISEMENT

ಕುಲಪತಿ ವೇಣುಗೋಪಾಲ್‌ ನೇಮಕ ರದ್ದು ಆದೇಶಕ್ಕೆ ಮಧ್ಯಂತರ ತಡೆ

ವಿಚಾರಣೆ ಅ. 16ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 19:05 IST
Last Updated 25 ಸೆಪ್ಟೆಂಬರ್ 2019, 19:05 IST
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌ 
ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌    

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ವೇಣುಗೋಪಾಲ್‌ ಕೆ.ಆರ್ ಅವರ ನೇಮಕಾತಿಯನ್ನು ರದ್ದುಪಡಿಸಿದ ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ಮಧ್ಯಂತರ ತಡೆ ನೀಡಿದೆ.

ವೇಣುಗೋಪಾಲ್ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಪ್ರತ್ಯೇಕವಾಗಿ ಸಲ್ಲಿಸಿದ್ದ ಎರಡು ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಸ್.ಆರ್‌.ಕೃಷ್ಣಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

‘ವೇಣುಗೋಪಾಲ್ 2018ರ ಜೂನ್‌ 12ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಂತದಲ್ಲಿ ಕುಲಪತಿ ಹುದ್ದೆಯನ್ನು ಖಾಲಿ ಬಿಡುವುದು ಸರಿಯಲ್ಲ’ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಅಕ್ಟೋಬರ್‌ 18ರವರೆಗೆ ಮಧ್ಯಂತರ ತಡೆ ನೀಡಿತು.

ADVERTISEMENT

ವಿಚಾರಣೆ ವೇಳೆ ಸಂಗಮೇಶ್‌ ಪರ ವಕೀಲ ಡಿ.ಆರ್.ರವಿಶಂಕರ್‌, ‘ಬೆಂಗಳೂರು ವಿಶ್ವವಿದ್ಯಾಲಯ ಮೇಲ್ಮನವಿ ಸಲ್ಲಿಸಿರುವುದು ಸರಿಯಲ್ಲ. ಅದನ್ನು ವಿಚಾರಣೆಗೆ ಅಂಗೀಕರಿಸಬಾರದು’ ಎಂದು ಮನವಿ ಮಾಡಿದರು. ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರವಷ್ಟೇ (ಸೆ.24) ವೇಣುಗೋಪಾಲ್‌ ನೇಮಕಾತಿ ರದ್ದುಗೊಳಿಸಿ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.