ADVERTISEMENT

ಕಾಂಗ್ರೆಸ್‌ಗೆ ಲಾಭಕ್ಕಿಂತ ನಷ್ಟವೇ ಜಾಸ್ತಿ: ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 14 ಜನವರಿ 2022, 17:11 IST
Last Updated 14 ಜನವರಿ 2022, 17:11 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ರಾಜಕೀಯ ಲಾಭ ಪಡೆಯುವ ಸ್ವಾರ್ಥದಿಂದ ಮೇಕೆದಾಟು ಪಾದಯಾತ್ರೆ ನಡೆಸಿದ ಕಾಂಗ್ರೆಸ್‌ ಪಕ್ಷಕ್ಕೆ ಲಾಭಕ್ಕಿಂತ ಹೆಚ್ಚು ನಷ್ಟವೇ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿದ್ದ ಪಾದಯಾತ್ರೆಯ ಹಿಂದೆ ಜನರಿಗೆ ಒಳಿತಾಗಬೇಕೆಂಬ ಭಾವನೆಗಿಂತಲೂ ರಾಜಕೀಯ ಸ್ವಾರ್ಥವೇ ಜಾಸ್ತಿ ಇತ್ತು. ಹಾಗಾಗಿ ಇವರ ಪಾದಯಾತ್ರೆಯಿಂದ ಏನೂ ಆಗಲಿಲ್ಲ’ ಎಂದರು.

ಕಾಂಗ್ರೆಸ್‌ನ ಪಾದಯಾತ್ರೆಯನ್ನು ನಿಲ್ಲಿಸಲು ಸರ್ಕಾರ ಷಡ್ಯಂತ್ರ ನಡೆಸಿತ್ತು ಎಂಬುದು ಆಧಾರರಹಿತ ಆರೋಪ. ಅವರ ವೈಫಲ್ಯ ಮುಚ್ಚಿಕೊಳ್ಳಲು ಏನೇನೋ ಆರೋಪ ಮಾಡುತ್ತಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ಪಾದಯಾತ್ರೆ ಕೈಗೊಳ್ಳುವ ನಿರ್ಧಾರ ಮತ್ತು ಪಾದಯಾತ್ರೆ ನಡೆಸಿದ್ದು ಎರಡೂ ಕಾಂಗ್ರೆಸ್‌ನವರ ತಪ್ಪು ಎಂದು ಸಚಿವರು ಹೇಳಿದರು.

ADVERTISEMENT

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯದಲ್ಲಿ ಯಾರ ವಿರೋಧವೂ ಇಲ್ಲ. ಕಾಂಗ್ರೆಸ್‌ನವರು ಯಾರ ವಿರುದ್ಧ ಪ್ರತಿಭಟನೆ ನಡೆಸಿದರು ಎಂಬುದೇ ಗೊತ್ತಾಗಲಿಲ್ಲ. ಅಧಿಕಾರದಲ್ಲಿದ್ದಾಗ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಏನನ್ನೂ ಮಾಡದವರು ಈಗ ಪಾದಯಾತ್ರೆ ಮಾಡಿದರು ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.