ಬೆಂಗಳೂರು: ಗೌರವಧನ ಹೆಚ್ಚಳವೂ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ರಾಜ್ಯ ಗ್ರಾಮ ಪಂಚಾಯಿತಿ ಮಟ್ಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯದ ಸಂಪನ್ಮೂಲ ವ್ಯಕ್ತಿಗಳ ಸಖಿಯರ ಮಹಾ ಒಕ್ಕೂಟದ ಸದಸ್ಯರು ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರದಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಸದಸ್ಯರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು ಎಂದೂ ಪ್ರತಿಭಟನಕಾರರು ಆಗ್ರಹಿಸಿದರು.
ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು. ಆದರೂ ಬೇಡಿಕೆ ಈಡೇರಿಲ್ಲ. ಕಳೆದ ಅಕ್ಟೋಬರ್‌ನಲ್ಲಿ ಗೌರವಧನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದೇಶಕ್ಕೆ ಸಖಿಯರ ಮಹಾ ಒಕ್ಕೂಟದ ವಿರೋಧ ಇದೆ. ಆ ಆದೇಶವನ್ನು ವಾಪಸ್ ಪಡೆದು, ಗೌರವಧನ ಹೆಚ್ಚಿಸಿ ಹೊಸ ಆದೇಶವನ್ನು ಹೊರಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರಿಗೆ ತಿಂಗಳಿಗೆ ₹20 ಸಾವಿರ ಹಾಗೂ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಗೆ ₹15 ಸಾವಿರ ಗೌರವಧನ ನಿಗದಿ ಪಡಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರದಿಂದ ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮೆ ಆಗಬೇಕು. ಕೆಲಸದ ಜತೆಗೆ ಗ್ರಾಮ ಪಂಚಾಯಿತಿಗಳ ಹಲವು ಕೆಲಸಗಳನ್ನು ಮಾಡಬೇಕಾಗಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗೆ ವಹಿಸಬೇಕು. ವೇತನ ಸಹಿತ ಹೆರಿಗೆ ರಜೆ ಮಂಜೂರು ಮಾಡಬೇಕು. ಮಹಿಳಾ ಸಿಬ್ಬಂದಿಯ ಮೇಲೆ ನಡೆಯುತ್ತಿರುವ ಮಾನಸಿಕ ದೌರ್ಜನ್ಯ ನಿಲ್ಲಿಸಬೇಕು. ಇಎಸ್‌ಐ ಹಾಗೂ ಪಿಎಫ್ ಸೌಲಭ್ಯಗಳನ್ನು ಒದಗಿಸಬೇಕು ಎಂದೂ ಆಗ್ರಹಿಸಿದರು.
ಪ್ರತಿಭಟನೆಯ ನೇತೃತ್ವವನ್ನು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಮಹಾ ಒಕ್ಕೂಟದ ರಾಜ್ಯ ಅಧ್ಯಕ್ಷೆ ರುದ್ರಮ್ಮ, ಪ್ರಧಾನ ಕಾರ್ಯದರ್ಶಿ ಕುಸುಮಾ, ರಾಜ್ಯ ಉಪಾಧ್ಯಕ್ಷ ಗುರುಬಸಮ್ಮ, ಖಜಾಂಚಿ ಪುಷ್ಪಾ ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.