
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ‘ರಾಜ್ಯ ಸರ್ಕಾರವು ಮರ್ಯಾದೆಗೇಡು ಹತ್ಯೆ ನಿಷೇಧಕ್ಕೆ ಕಾಯ್ದೆ ರಚಿಸಿ, ಅದನ್ನು ಜಾರಿಗೊಳಿಸಬೇಕು ಎಂದು ಹೋರಾಟಗಾರ್ತಿ ಕೆ.ಎಸ್. ವಿಮಲಾ ಆಗ್ರಹಿಸಿದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಮಂಗಳವಾರ ಆಯೋಜಿಸಿದ್ದ ನಿರಾಂತಕ ಹಗಲು ನಿರ್ಭಯದ ರಾತ್ರಿಗಳ ಖಾತ್ರಿಗಾಗಿ 2025ಕ್ಕೆ ವಿದಾಯ ಹಾಗೂ 2026ಕ್ಕೆ ಸ್ವಾಗತ ಸಾಂಸ್ಕೃತಿಕ ಅಭಿವ್ಯಕ್ತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಬಜೆಟ್ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆ ಮಂಡಿಸಬೇಕು. ರಾಜ್ಯದಲ್ಲಿ ಮರ್ಯಾದೆಗೇಡು ಹತ್ಯೆಗಳು ನಡೆಯದಂತೆ ಸುರಕ್ಷಿತ ವಾತಾವರಣ ನಿರ್ಮಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಸೇರಿ ನಿರಂತರ ಹೋರಾಟಗಳನ್ನು ಮಾಡುವ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಈ ಬಗ್ಗೆ ಪತ್ರ ಚಳವಳಿಯನ್ನು ಪ್ರಾರಂಭಿಸಲಾಗುವುದು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು’ ಎಂದು ಒತ್ತಾಯಿಸಿದರು.
ಲೇಖಕಿ ವಸುಂಧರಾ ಭೂಪತಿ ಮಾತನಾಡಿ, ‘ಇತ್ತೀಚೆಗೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ರೈಲು, ಬಸ್‌ಗಳಲ್ಲಿ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು. ಅಂತರ್ ಜಾತಿ ವಿವಾಹವಾದ ಕಾರಣ ಹುಬ್ಬಳ್ಳಿಯಲ್ಲಿ ಹೆತ್ತ ಮಗಳನ್ನೆ ತಂದೆ ಹತ್ಯೆ ಮಾಡಿರುವುದು ಖಂಡನೀಯ. ಇಂತಹ ಪ್ರಕರಣಗಳು ಮರುಕಳಿಸದಂತೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
‘ಮಹಿಳೆಯರು ಸಮಾಜದಲ್ಲಿ ನಿರ್ಭೀತಿಯಿಂದ ಜೀವನ ನಡೆಸುವ ಸುರಕ್ಷಿತ ಪರಿಸರ ನಿರ್ಮಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮಾನ ಅವಕಾಶಗಳಿದ್ದರೂ, ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ’ ಎಂದರು.
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಉಪಾಧ್ಯಕ್ಷರಾದ ಕೆ.ಎಸ್. ಲಕ್ಷ್ಮಿ, ಗೌರಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.