ADVERTISEMENT

ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌: ಸಚಿವ ನಾರಾಯಣಗೌಡ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2021, 12:08 IST
Last Updated 10 ಫೆಬ್ರುವರಿ 2021, 12:08 IST
ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ನಾರಾಯಣಗೌಡ
ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ನಾರಾಯಣಗೌಡ   

ಬೆಂಗಳೂರು: ನಗರದ ಎಚ್‌.ಎಸ್‌.ಆರ್‌ ಲೇಔಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗಾಗಿ ವಸತಿ ನಿಲಯ ನಿರ್ಮಿಸಲಾಗುವುದು ಎಂದು ಕ್ರೀಡಾ ಮತ್ತು ಯುವ ಸಬಲೀಕರಣ ಸಚಿವ ನಾರಾಯಣಗೌಡ ತಿಳಿಸಿದರು.

ವಸತಿ ನಿಲಯ ₹60 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮತಿ ಪಡೆಯಲಾಗುವುದು ಎಂದು ಅವರು ವಿಕಾಸಸೌಧದಲ್ಲಿ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಿಳಿಸಿದರು.

ಕಲ್ಯಾಣ ಕರ್ನಾಟಕದ ಭಾಗದ ವಿದ್ಯಾರ್ಥಿಗಳಿಗೆ ಬೆಂಗಳೂರಿನಲ್ಲಿ ವಸತಿ ನಿಲಯ ನಿರ್ಮಿಸಬೇಕು ಎನ್ನುವುದು ಬಹು ದಿನಗಳ ಬೇಡಿಕೆಯಾಗಿತ್ತು ಅದನ್ನು ತ್ವರಿತಗತಿಯಲ್ಲಿ ಈಡೇರಿಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪನೆಯಾದ ಬಳಿಕ ಇರುವರೆಗೆ ₹5,348 ಕೋಟಿ ಅನುದಾನ ಬಿಡುಗಡೆಯಾಗಿದೆ. 2020–21ನೇ ಸಾಲಿನಲ್ಲಿ ₹1,131 ಕೋಟಿ ಅನುದಾನ ಹಂಚಿಕೆಯಾಗಿದೆ. ಇತರೆ ಇಲಾಖೆಗಳು ಹಾಗೂ ವಿಶೇಷ ಅಭಿವೃದ್ಧಿ ಯೋಜನೆಯಡಿ ಹೆಚ್ಚಿನ ಅನುದಾನ ಈ ಭಾಗಕ್ಕೆ ನೀಡುತ್ತಿದ್ದರೂ ಕಣ್ಣಿಗೆ ಕಾಣುವ ಅಭಿವೃದ್ಧಿ ಕಾರ್ಯಗಳು ಆಗದೇ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ₹100 ಕೋಟಿ ಅನುದಾನ ನೀಡಲಾಗಿದೆ. ಆದರೆ, ₹5 ಕೋಟಿ ಅನುದಾನ ಮಾತ್ರ ಬಳಕೆಯಾಗಿದೆ. ಮಾರ್ಚ್‌ ಶೇ 100 ರಷ್ಟು ಅನುದಾನ ಬಳಕೆಯಾಗಬೇಕು ಎಂದು ಸೂಚನೆ ನೀಡಿದರು.

ಕೃಷಿ, ಹೈನುಗಾರಿಕೆ, ಪಶುಶಂಗೋಪನೆ ಸೇರಿದಂತೆ ಪ್ರಮುಖ ವ್ಯವಸಾಯದಲ್ಲಿ ಪರಿಣಿತಿ ಹೊಂದಿರುವ ರಾಜ್ಯದ ಮಾದರಿ ರೈತರನ್ನು ಗುರುತಿಸಿ, ಅವರಿಂದ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ಅಗತ್ಯ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಮುಂದಿನ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ನೀಡಲು ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಅದಕ್ಕೆ ಅಗತ್ಯವಿರುವ ಕ್ರಿಯಾ ಯೋಜನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮತ್ತು ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.