ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ನಾಲ್ಕು ದಿನ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ.
ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದಾದ್ಯಂತ ಮುಂದಿನ ಒಂದು ವಾರ ಒಣಹವೆ ಇರುವ ಸಂಭವವಿದೆ. ಮುಂದಿನ ಐದು ದಿನಗಳು ರಾಜ್ಯದಲ್ಲಿ ಗರಿಷ್ಠ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ. ಮೇ 2ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ ಎಂದು ಇಲಾಖೆ ಹೇಳಿದೆ.
ಭಾನುವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಹಿಂದಿನ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಕಲಬುರಗಿಯಲ್ಲಿ ಗರಿಷ್ಠ (42.9 ಡಿಗ್ರಿ ಸೆಲ್ಸಿಯಸ್) ಉಷ್ಣಾಂಶ ವರದಿಯಾಗಿದೆ.
ಬೆಂಗಳೂರಿನಲ್ಲಿ 38.5 ಡಿಗ್ರಿ ಸೆಲ್ಸಿಯಸ್: ಬೆಂಗಳೂರಿನಲ್ಲಿ ತಾಪಮಾನ ಮತ್ತಷ್ಟು ಹೆಚ್ಚಳವಾಗಿದ್ದು, ಸತತ ಎರಡನೇ ದಿನವೂ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಭಾನುವಾರ ಗರಿಷ್ಠ ಉಷ್ಣಾಂಶ 38.5 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23.4 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಶನಿವಾರ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತ್ತು.
ಸೋಮವಾರ ಮತ್ತು ಮಂಗಳವಾರ ಕೂಡ ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.