
ಬೆಂಗಳೂರು: ಗರ್ಭಕಂಠ ಕ್ಯಾನ್ಸರ್ ತಡೆಗಟ್ಟಲು ಸಹಕಾರಿಯಾದ ‘ಹ್ಯೂಮನ್ ಪ್ಯಾಪಿಲೋಮವೈರಸ್ ಲಸಿಕೆ’ಯನ್ನು (ಎಚ್‌ಪಿವಿ) 14 ವರ್ಷದ ಹೆಣ್ಣು ಮಕ್ಕಳಿಗೆ ವಿತರಿಸುವ ಅಭಿಯಾನಕ್ಕೆ ನಗರದಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಬಿಜಿಎ, ಆರೋಗ್ಯ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಲಸಿಕೆ ವಿತರಿಸಲಾಯಿತು.
ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತಾ ರಾಥೋಡ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ಮೆನನ್, ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಕಾವ್ಯಾ ಎಸ್.ಟಿ., ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಪಾಲ್ಗೊಂಡಿದ್ದರು.
‘ಕೇಂದ್ರ ಸರ್ಕಾರದ ಆದೇಶದಂತೆ ಈ ಲಸಿಕಾ ಅಭಿಯಾನವನ್ನು ರಾಜ್ಯದಲ್ಲಿಯೂ ಹಮ್ಮಿಕೊಳ್ಳಲಾಗಿದೆ. ದೇಶದಲ್ಲಿ 14 ವರ್ಷದ ಸುಮಾರು 1.15 ಕೋಟಿ ಹುಡುಗಿಯರಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆಯನ್ನು ಹಾಕಲಾಗುತ್ತದೆ. ಈ ಅಭಿಯಾನವು ಮೂರು ತಿಂಗಳು ನಡೆಯಲಿದ್ದು, 14 ವರ್ಷದ ಎಲ್ಲ ಬಾಲಕಿಯರು ಲಸಿಕೆ ಪಡೆದುಕೊಳ್ಳಬೇಕು’ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.
‘ಮಹಿಳೆಯರಲ್ಲಿ ಹೆಚ್ಚಾಗಿ ಗರ್ಭಕಂಠ ಕ್ಯಾನ್ಸರ್ ಕಾಣಿಸಿಕೊಳ್ಳುತ್ತಿದೆ. ಈ ಕ್ಯಾನ್ಸರ್ ತಡೆಗೆ ಎಚ್‌ಪಿವಿ ಲಸಿಕೆ ಸಹಕಾರಿ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.