ADVERTISEMENT

ಡೆಂಗಿ ತಡೆಗೆ ಹಾಟ್ ಸ್ಪಾಟ್ ಗುರುತಿಸಿ: ಗುಂಡೂರಾವ್ ಸೂಚನೆ

ಈಡಿಸ್ ಲಾರ್ವಾ ನಾಶಪಡಿಸುವಿಕೆ ಅಭಿಯಾನದಲ್ಲಿ ದಿನೇಶ್ ಗುಂಡೂರಾವ್ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಜುಲೈ 2024, 14:38 IST
Last Updated 19 ಜುಲೈ 2024, 14:38 IST
ರಾಮಸ್ವಾಮಿ ಪಾಳ್ಯದಲ್ಲಿ ದಿನೇಶ್ ಗುಂಡೂರಾವ್ ಅವರು ಫಾಗಿಂಗ್ ನಡೆಸಿದರು. ಶಾಸಕ ರಿಜ್ವಾನ್ ಅರ್ಷದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
ರಾಮಸ್ವಾಮಿ ಪಾಳ್ಯದಲ್ಲಿ ದಿನೇಶ್ ಗುಂಡೂರಾವ್ ಅವರು ಫಾಗಿಂಗ್ ನಡೆಸಿದರು. ಶಾಸಕ ರಿಜ್ವಾನ್ ಅರ್ಷದ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.   

ಬೆಂಗಳೂರು: ‘ನಗರದಲ್ಲಿ 100 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಎರಡಕ್ಕಿಂತ ಹೆಚ್ಚು ಡೆಂಗಿ ಪ್ರಕರಣಗಳು ಕಂಡುಬಂದರೆ, ಆ ಪ್ರದೇಶವನ್ನು ಹಾಟ್ ಸ್ಪಾಟ್ ಎಂದು ಗುರುತಿಸಬೇಕು’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಜಂಟಿಯಾಗಿ ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಈಡಿಸ್ ಲಾರ್ವಾ ನಾಶಪಡಿಸುವಿಕೆ ಅಭಿಯಾನದಲ್ಲಿ ಪಾಲ್ಗೊಂಡ ಅವರು, ವಸಂತನಗರ ಹಾಗೂ ರಾಮಸ್ವಾಮಿ ಪಾಳ್ಯದಲ್ಲಿ ಮನೆ ಮನೆಗೆ ತೆರಳಿ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ಪರಿಶೀಲನೆ ನಡೆಸಿದರು. ಇದೇ ವೇಳೆ ಸ್ವತಃ ಅವರು ಫಾಗಿಂಗ್ ಮಾಡಿದರು.

‘ಎರಡಕ್ಕಿಂತ ಹೆಚ್ಚು ಡೆಂಗಿ ಪ್ರಕರಣಗಳು ವರದಿಯಾದ ಪ್ರದೇಶದ 100 ಮೀಟರ್ ವ್ಯಾಪ್ತಿಯಲ್ಲಿನ ಮನೆಗಳಿಗೆ ಭೇಟಿ ನೀಡಿ, ಜ್ವರ ಪರೀಕ್ಷೆ, ಲಾರ್ವಾ ಸಮೀಕ್ಷೆ, ಫಾಗಿಂಗ್ ಹಾಗೂ ಸ್ಪ್ರೇ ಮಾಡಬೇಕು. ಡೆಂಗಿ ಹರಡದಂತೆ ಮುಂಜಾಗ್ರತೆ ವಹಿಸಲು ಭಿತ್ತಿ ಪತ್ರಗಳನ್ನು ಜನರಿಗೆ ವಿತರಿಸಿ, ಅರಿವು ಮೂಡಿಸಬೇಕು. ಇದಲ್ಲದೆ, ಸೊಳ್ಳೆಗಳಿಂದ ರಕ್ಷಿಸಿಕೊಳ್ಳಲು ಕ್ರೀಮ್‌ಗಳನ್ನು ವಿತರಿಸಿ, ಕೈ–ಕಾಲುಗಳಿಗೆ ಹಚ್ಚಿಕೊಳ್ಳುವಂತೆ ತಿಳಿಸಬೇಕು’ ಎಂದು ಅಧಿಕಾರಿಗಳಿ ತಿಳಿಸಿದರು.

ADVERTISEMENT

ರಾಮಸ್ವಾಮಿ ಪಾಳ್ಯದ ಕೊಳೆಗೇರಿ ಪ್ರದೇಶದಲ್ಲಿ ಜ್ವರ ಚಿಕಿತ್ಸಾಲಯಕ್ಕೆ (ಫೀವರ್ ಕ್ಲಿನಿಕ್‌) ಚಾಲನೆ ನೀಡಿದ ಅವರು, ‘ಡೆಂಗಿ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಅಧಿಕ ಪ್ರಕರಣಗಳು ಕಂಡುಬರುವ ಕೊಳೆಗೇರಿ ಪ್ರದೇಶಗಳಲ್ಲಿ ಈ ಚಿಕಿತ್ಸಾಲಯಗಳನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಸಚಿವರು, ಮಕ್ಕಳಿಗೆ ಡೀಟ್ ಕ್ರೀಮ್ ವಿತರಿಸಿದರು. ಕೈ ಮತ್ತು ಕಾಲುಗಳಿಗೆ ಈ ಕ್ರೀಮ್  ಹಚ್ಚಿಕೊಳ್ಳುವಂತೆ ತಿಳಿಸಿದ ಅವರು, ‘ಡೆಂಗಿ ನಿಯಂತ್ರಣಕ್ಕೆ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಲು ನಿಮ್ಮ ಮನೆಯಲ್ಲಿನ ಪೋಷಕರು ಹಾಗೂ ಸುತ್ತಮುತ್ತಲಿನ ಮನೆಯವರಲ್ಲಿ ಅರಿವು ಮೂಡಿಸಬೇಕು’ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. 

ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕ ನವೀನ್ ಭಟ್, ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳಾದ ಡಾ. ಸೈಯದ್ ಸಿರಾಜುದ್ದೀನ್ ಮದನಿ, ಡಾ. ನಿರ್ಮಲಾ ಬುಗ್ಗಿ, ಪಶ್ವಿಮ ವಲಯ ಆರೋಗ್ಯಾಧಿಕಾರಿ ಡಾ. ಭಾಗ್ಯಲಕ್ಷ್ಮಿ ಉಪಸ್ಥಿತರಿದ್ದರು.

ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಡೆಂಗಿ ಪ್ರಕರಣಗಳು ನಿಯಂತ್ರಣಕ್ಕೆ ಬರುವ ಸಾಧ್ಯತೆಯಿದೆ. ಆದರೂ ಸೆಪ್ಟೆಂಬರ್ ತಿಂಗಳವರೆಗೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯ

।ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ

ಡಯಾಲಿಸಿಸ್ ಕೇಂದ್ರ ಪ್ರಾರಂಭಕ್ಕೆ ಸೂಚನೆ

ವಸಂತನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಶೀಘ್ರದಲ್ಲಿಯೇ ಪ್ರಾರಂಭಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ದಿನೇಶ್ ಗುಂಡೂರಾವ್ ‘ಉಚಿತ ಡಯಾಲಿಸಿಸ್ ಸೇವೆ ಪ್ರಾರಂಭಿಸುವುದರಿಂದ ಇಲ್ಲಿನ ಸುತ್ತಮುತ್ತಲಿನ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ. ಅದಕ್ಕಾಗಿ ಅಗತ್ಯ ಉಪಕರಣಗಳ ವ್ಯವಸ್ಥೆ ಮಾಡಿಕೊಂಡು ತ್ವರಿತಗತಿಯಲ್ಲಿ ಕೇಂದ್ರವನ್ನು ಆರಂಭಿಸಬೇಕು’ ಎಂದು ತಿಳಿಸಿದರು. ಇದೇ ವೇಳೆ ಆರೋಗ್ಯ ಕೇಂದ್ರದ ಕಾರ್ಯವೈಖರಿಯನ್ನು ಪರಿಶೀಲಿಸಿ ಪ್ರತಿನಿತ್ಯ ಎಷ್ಟು ಮಂದಿ ಆಸ್ಪತ್ರೆಗೆ ಭೇಟಿ ನೀಡುತ್ತಾರೆ? ಎಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ? ಎಂಬಿತ್ಯಾದಿ ಮಾಹಿತಿಯನ್ನು ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.