ADVERTISEMENT

ಐಎಂಎ: ಸಿಬಿಐಗೆ ಹೈಕೋರ್ಟ್‌ ನೋಟಿಸ್

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 19:31 IST
Last Updated 11 ಜುಲೈ 2019, 19:31 IST

ಬೆಂಗಳೂರು: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿಯ ಬಹುಕೋಟಿ ಮೊತ್ತದ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್‌ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಬಿ.ಎಂ.ವಿಜಯಶಂಕರ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಕೇಂದ್ರ ಗೃಹ ಸಚಿವಾಲಯದ ಕಾರ್ಯದರ್ಶಿ ಮತ್ತು ಕಂಪನಿ ಹಾಗೂ ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಸೇರಿದಂತೆ ಒಟ್ಟು 13 ಜನ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ADVERTISEMENT

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಉದಯ ಹೊಳ್ಳ ಅವರು, ’ಇದೊಂದು ಅಂತರರಾಜ್ಯ ವ್ಯಾಪ್ತಿಯ ಪ್ರಕರಣ. ಸಿಬಿಐ ತನಿಖೆ ನಡೆಸಲು ಅಭ್ಯಂತರವೇನೂ ಇಲ್ಲ. ಆದರೆ, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಭಾಗೀಯ ನ್ಯಾಯಪೀಠದಲ್ಲಿ ಅರ್ಜಿಗಳ ವಿಚಾರಣೆ ಬಾಕಿ ಇದೆ. ಹಾಗಾಗಿ ಇದನ್ನೂ ಅಲ್ಲಿಗೇ ವರ್ಗಾಯಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ನಿಮ್ಮ ಈ ಮನವಿಯನ್ನು ವಿಭಾಗೀಯ ನ್ಯಾಯಪೀಠದ ಮುಂದೆಯೇ ಮಂಡಿಸಿ’ ಎಂದು ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿತು.

ಎಸ್‌ಐಟಿ ಬಂಧನದಲ್ಲಿ: ಐಎಂಎ ಸಮೂಹ ಕಂಪನಿಗೆ ಕ್ಲೀನ್‌ ಚಿಟ್‌ ನೀಡಲು ₹ 1.5 ಕೋಟಿ ಲಂಚ ಪಡೆದ ಆರೋಪದಡಿ ಬಿ.ಎಂ.ವಿಜಯಶಂಕರ್ ಅವರು ಸದ್ಯ ಎಸ್‌ಐಟಿ (ವಿಶೇಷ ತನಿಖಾ ತಂಡ) ವಶದಲ್ಲಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.