ADVERTISEMENT

ಐಎಂಎ: ಎಸ್‌ಐಟಿ ತನಿಖಾ ವರದಿ ಸಲ್ಲಿಕೆಗೆ ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 19:32 IST
Last Updated 24 ಜುಲೈ 2019, 19:32 IST
   

ಬೆಂಗಳೂರು: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಸಮೂಹ ಕಂಪನಿ ಹಗರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಈತನಕ ನಡೆಸಿರುವ ತನಿಖೆಯ ವರದಿಯನ್ನು ಇದೇ 30ರಂದು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ಸಲ್ಲಿಸಿ’ ಎಂದು ಹೈಕೋರ್ಟ್ ಎಸ್‌ಐಟಿಗೆ ಆದೇಶಿಸಿದೆ.

‘ಐಎಂಎ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ದೇಶಿಸಬೇಕು’ ಎಂದು ಕೋರಿ ಸಲ್ಲಿಸಲಾಗಿರುವ ಐದು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಹೈಕೋರ್ಟ್‌ ನಿರ್ದೇಶನದ ಅನುಸಾರ, ಬೆಂಗಳೂರು ಪ್ರಾದೇಶಿಕ ಅಧಿಕಾರಿಯನ್ನು ಸಕ್ಷಮ ಪ್ರಾಧಿಕಾರದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಈ ಪ್ರಕರಣದಲ್ಲಿ ಸಕ್ಷಮ ಪ್ರಾಧಿಕಾರದ ಅಧಿಕಾರಿಯಾಗಿದ್ದ ಜಿಲ್ಲಾಧಿಕಾರಿಯ ವಿಶ್ವಾಸಾರ್ಹತೆಯನ್ನು ಮೊದಲಿಗೆ ಗಮನಿಸಿರಲಿಲ್ಲವೇ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಅರ್ಜಿದಾರರ ಪರ ವಕೀಲ ರಹಮತುಲ್ಲಾ ಕೊತ್ವಾಲ್‌, ‘ಈ ಪ್ರಕರಣದಲ್ಲಿ ಎಂಎಲ್‌ಎ, ಎಂಎಲ್‌ಸಿ, ರಾಜ್ಯಸಭಾ ಸದಸ್ಯರು ಸೇರಿದಂತೆ ಹಲವು ಪ್ರಭಾವಿಗಳ ಕೈವಾಡ ಇದೆ. ಆದ್ದರಿಂದ ಇದನ್ನು ಸಿಬಿಐಗೆ ಒಪ್ಪಿಸಲು ನಿರ್ದೇಶಿಸಬೇಕು’ ಎಂದು ಕೋರಿದರು.

ಮುಂದೂಡಿಕೆ: ‘ಹಗರಣದಲ್ಲಿ ಜಪ್ತಿ ಮಾಡಲಾಗಿರುವ ಸ್ಥಿರ ಮತ್ತು ಚರಾಸ್ತಿಯನ್ನು ಫೊರೆನ್ಸಿಕ್‌ ವಿಧಾನದ ಮೂಲಕ (ಹಣ ಯಾರಿಂದ ಯಾರ ಕೈ ಸೇರಿದೆ ಎಂಬ ನಿಖರ ವಿವರ ಪತ್ತೆ ಹಚ್ಚುವ ವಿಧಾನ) ಲೆಕ್ಕ ಪರಿಶೋಧನೆ ನಡೆಸಬೇಕು’ ಎಂದು ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 30ಕ್ಕೆ ಮುಂದೂಡಿತು.

ನಿರ್ದೇಶನ: ‘ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ ಶಂಕರ್ ಐಎಂಎ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ವರದಿ ನೀಡಿದ್ದರು. ಆದರೂ ಅಂತಹ ಅಧಿಕಾರಿಯನ್ನೇ ಏಕೆ ಸಕ್ಷಮ ಪ್ರಾಧಿಕಾರದ ಅಧಿಕಾರಿಯಾಗಿ ನೇಮಿಸಿದಿರಿ, ಬಂಧನದ ನಂತರವೂ ಅವರನ್ನು ಏಕೆ ಅದೇ ಸ್ಥಾನದಲ್ಲಿ ಮುಂದುವರಿಸಿದಿರಿ ಎಂಬ ಪ್ರಶ್ನೆಗಳಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನಾಲ್ಕು ವಾರಗಳಲ್ಲಿ ವಿಚಾರಣೆ ನಡೆಸಿ ವರದಿ ನೀಡಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.