ADVERTISEMENT

ಐಎಂಎ ಪ್ರಕರಣ: ಬಂಗಾರದ ಬಿಸ್ಕತ್‌ ಬಗ್ಗೆ ವಿವರ ಸಲ್ಲಿಸಿ

ಪಿಐಎಲ್‌ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2019, 19:57 IST
Last Updated 28 ಆಗಸ್ಟ್ 2019, 19:57 IST
   

ಬೆಂಗಳೂರು: ‘ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ತನಿಖೆಯ ವೇಳೆ ವಶಪಡಿಸಿಕೊಂಡಿರುವ ಬಂಗಾರದ ಬಿಸ್ಕತ್‌ಗಳ ಸಮಗ್ರ ವಿವರವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿ’ ಎಂದು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌. ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಟಿ. ಸುನಿಲ್‌ ರಾವ್‌, 'ಇತ್ತೀಚೆಗೆ ಎಸ್‌ಐಟಿ, ಮನ್ಸೂರ್‌ ಖಾನ್‌ ಬಳಿಯಿಂದ ಒಟ್ಟು 303 ಕೆ.ಜಿ ತೂಕದ 5,008 ಬಂಗಾರದ ಬಿಸ್ಕತ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕುರಿತ ಸತ್ಯಾಂಶವನ್ನು ಕೋರ್ಟ್‌ಗೆ ತಿಳಿಸಬೇಕು’ ಎಂದು ಕೋರಿದರು.

ADVERTISEMENT

ಇದೇ ವೇಳೆ ಅಭಯ್‌ ಎಸ್‌.ಓಕಾ ಅವರು, ಸಿಬಿಐ ತನಿಖೆ ಆರಂಭಿಸಿದೆಯೇ ಎಂದು ಸಿಬಿಐ ಪರ ವಕೀಲರನ್ನು ಪ್ರಶ್ನಿಸಿದರು. ಇದಕ್ಕೆ ಪಿ.ಪ್ರಸನ್ನಕುಮಾರ್‌, ‘ಸಿಬಿಐ ಇನ್ನೂ ತನಿಖೆ ಆರಂಭಿಸಿಲ್ಲ. ಕೇಂದ್ರ ಈ ಕುರಿತು ಅಧಿಸೂಚನೆ ಹೊರಡಿಸಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ಹಿರಿಯ ಐಎಎಸ್ ಅಧಿಕಾರಿ ಹರ್ಷಗುಪ್ತ ಅವರನ್ನು ಐಎಂಎ ಪ್ರಕರಣದ ಪೂರ್ಣಾವಧಿ ಸಕ್ಷಮ ಪ್ರಾಧಿಕಾರಿಯನ್ನಾಗಿ ನೇಮಿಸಲಾಗಿದೆ’ ಎಂದು ವಿವರಿಸಿದರು.

ಇದಕ್ಕೆ ಅರ್ಜಿದಾರರ ಪರ ವಕೀಲ ಜಿ.ಆರ್.ಮೋಹನ್‌, ‘ಸಕ್ಷಮ ಪ್ರಾಧಿಕಾರದ ಅಧಿಕಾರಿಯನ್ನು ಕನಿಷ್ಠ ಒಂದು ವರ್ಷದವರೆಗೆ ಬದಲಾಯಿಸಬಾರದು’ ಎಂದು ಮನವಿ ಮಾಡಿದರು. ವಿಚಾರಣೆಯನ್ನು ಸೆಪ್ಟೆಂಬರ್‌ 16ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.