ಬೆಂಗಳೂರು: ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ಯುವತಿಯ ಹಿಂಬಾಲಿಸಿ, ಆಕೆಯನ್ನು ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿದ ಪ್ರಕರಣದ ಆರೋಪಿಯ ಪತ್ತೆಗಾಗಿ ಸಿ.ಸಿ.ಟಿ.ವಿಗಳ ಕ್ಯಾಮೆರಾದಲ್ಲಿ ಸೆರೆಯಾದ 300ಕ್ಕೂ ಅಧಿಕ ದೃಶ್ಯಾವಳಿಗಳನ್ನು ಪರಿಶೀಲಿಸಿ, ವಿಶ್ಲೇಷಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ತಿಳಿಸಿದರು.
‘ಘಟನೆ ಸಂಬಂಧ ಸ್ಥಳೀಯ ನಿವಾಸಿಯೊಬ್ಬರು ದೂರು ನೀಡಿದ್ದರು. ದೂರು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರ ನೇತೃತ್ವದಲ್ಲಿ ಸುದ್ದಗುಂಟೆಪಾಳ್ಯ ಠಾಣೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದರು.
ಸುದ್ದಗುಂಟೆ ಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಘಟನೆ ನಡೆದಿತ್ತು. ರಸ್ತೆಯಲ್ಲಿ ನಡೆದು ತೆರಳುತ್ತಿದ್ದ ಯುವತಿಯನ್ನು ಯುವಕನೊಬ್ಬ ಬಲವಂತವಾಗಿ ತಬ್ಬಿಕೊಳ್ಳಲು ಯತ್ನಿಸಿ, ಆಕೆಯ ಖಾಸಗಿ ಭಾಗವನ್ನು ಸ್ಪರ್ಶಿಸಿ ಪರಾರಿ ಆಗಿದ್ದ. ಈ ದೃಶ್ಯವು ಅಲ್ಲಿನ ಸಿ.ಸಿ.ಟಿ.ವಿ ಕ್ಯಾಮೆರಾವೊಂದರಲ್ಲಿ ಸೆರೆ ಆಗಿತ್ತು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.