ADVERTISEMENT

ಸೋಂಕು ಹೆಚ್ಚಳದ ಕಾರಣ: 'ಡಿಸೆಂಬರ್‌ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ'

ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 6:20 IST
Last Updated 23 ನವೆಂಬರ್ 2020, 6:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್ ಕಾರಣ ರಾಜ್ಯದಲ್ಲಿ ಡಿಸೆಂಬರ್‌ನಲ್ಲೂ ಶಾಲೆಗಳನ್ನು ತೆರೆಯುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಸಮಿತಿ ಅಧ್ಯಕ್ಷ ಡಾ. ಎಂ.ಕೆ. ಸುದರ್ಶನ್ ಅವರ ಅಧ್ಯಕ್ಷತೆಯಲ್ಲಿ ಭಾನುವಾರ (ನ. 22) ನಡೆದ ಸಲಹಾ ಸಮಿತಿ ಸಭೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ಚರ್ಚೆಯಾಗಿದ್ದು, ಡಿಸೆಂಬರ್‌ನಲ್ಲಿ ಶಾಲೆ ತೆರೆಯುವುದು ಸೂಕ್ತವಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಡಿಸೆಂಬರ್ ಕೊನೆಯ ವಾರದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಶಾಲೆಗಳನ್ನು ತೆರೆಯಲು ಮತ್ತೆ ನಿರ್ಧಾರ ಕೈಗೊಳ್ಳಬಹುದು ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ.

ADVERTISEMENT

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ಸೂಚನೆ ಮೇರೆಗೆ ಹೆಚ್ಚು ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆಸ್ಪತ್ರೆಗಳಲ್ಲೂ ಸೌಲಭ್ಯ ಹೆಚ್ಚಿಸಲಾಗಿದೆ. ಈಗ ಪ್ರತಿ ದಿನ ಸರಾಸರಿ 1,700 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಎಂಟು ತಿಂಗಳಲ್ಲಿ ಕೈಗೊಂಡ ನಾನಾ ಕ್ರಮಗಳ ಪರಿಣಾಮವಾಗಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಆದರೆ ದೆಹಲಿ, ಹರಿಯಾಣ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಸೋಂಕು ಹರಡುವಿಕೆ ವೇಗ ಪಡೆದಿದೆ ಎಂದು ಸಭೆಯಲ್ಲಿ ಚರ್ಚೆಯಾಗಿದೆ.

ಚಳಿಗಾಲವೂ ಇರುವುದರಿಂದ ಕೋವಿಡ್ ಸೋಂಕು ಹರಡುವಿಕೆ ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ತೀವ್ರವಾಗಿ ಬಾಧಿಸುತ್ತದೆ. ಸೆಪ್ಟೆಂಬರ್‌ನಲ್ಲಿ ನಡೆದ ಸಮೀಕ್ಷೆ ಪ್ರಕಾರ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ, ಡಿಸೆಂಬರ್‌ನಲ್ಲಿ ಶಾಲೆಗಳನ್ನು ಆರಂಭಿಸುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಈ ಅಭಿಪ್ರಾಯವನ್ನೇ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.