ಮಾಣಿಕ್ ಷಾ ಮೈದಾನದಲ್ಲಿ
ಬೆಂಗಳೂರು: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ರಾಜ್ಯಮಟ್ಟದ ಸ್ವಾತಂತ್ರ್ಯ ದಿನಾಚರಣೆಗೆ ಬಿಬಿಎಂಪಿ ಹಾಗೂ ಜಿಲ್ಲಾಡಳಿತ ಸಿದ್ಧತಾ ಕಾರ್ಯ ಆರಂಭಿಸಿವೆ.
ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್, ಜಿಲ್ಲಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.
‘ಆಯಾ ಇಲಾಖೆಗಳಿಗೆ ನೀಡಿರುವ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಬೇಕು. ಲೋಪದೋಷಗಳಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಆಸನಗಳ ವ್ಯವಸ್ಥೆ, ಯಾವ ದ್ವಾರಗಳಲ್ಲಿ ಯಾರಿಗೆ ಪ್ರವೇಶ ನೀಡಬೇಕು, ಪಾರ್ಕಿಂಗ್ ವ್ಯವಸ್ಥೆ, ಮಾರ್ಗ ಬದಲಾವಣೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲದಂತೆ ನೋಡಿಕೊಳ್ಳಬೇಕು’ ಎಂದು ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆಯ ಆರೋಗ್ಯ ವಿಭಾಗದಿಂದ ಪ್ರಥಮ ಚಿಕಿತ್ಸೆ ವ್ಯವಸ್ಥೆ, ಆಂಬುಲೆನ್ಸ್, ಮೈದಾನದಲ್ಲಿ ಶೌಚಾಲಯಗಳ ವ್ಯವಸ್ಥೆ ಮಾಡಬೇಕು. ಮುನ್ನೆಚ್ಚರಿಕೆ ಹಾಗೂ ಭದ್ರತೆಯ ದೃಷ್ಠಿಯಿಂದ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಗತ್ಯ ಸಿದ್ಧತೆ ಮಾಡಿಕೊಂಡು, ತಂಡಗಳನ್ನು ಆಯ್ಕೆ ಮಾಡಬೇಕು. ಪ್ರವೇಶ ದ್ವಾರಗಳ ಬಳಿ ತಪಾಸಣೆಗಾಗಿ ಪೊಲೀಸ್ ಸಿಬ್ಬಂದಿ ಹಾಗೂ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಬಿಬಿಎಂಪಿ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ನವೀನ್ ಕುಮಾರ್ ರಾಜು, ವಲಯ ಆಯುಕ್ತರಾದ ದಿಗ್ವಿಜಯ್ ಬೊಡ್ಕೆ, ರಮ್ಯಾ, ಪೊಲೀಸ್, ಬೆಸ್ಕಾಂ, ಲೋಕೋಪಯೋಗಿ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.