ADVERTISEMENT

ಇಂಜಾಜ್‌ ವಂಚನೆ ಪ್ರಕರಣ: ₹20.16 ಕೋಟಿ ಆಸ್ತಿ ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2023, 20:17 IST
Last Updated 20 ಮಾರ್ಚ್ 2023, 20:17 IST
   

ಬೆಂಗಳೂರು: ಹೆಚ್ಚಿನ ಠೇವಣಿ ನೀಡುವುದಾಗಿ ಆಮಿಷ ಒಡ್ಡಿ ಸಾರ್ವಜನಿಕರಿಂದ ಠೇವಣಿ ಸಂಗ್ರಹಿಸಿ ನೂರಾರು ಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ನಗರದ ಇಂಜಾಜ್‌ ಇಂಟರ್‌ನ್ಯಾಷನಲ್‌ ಕಂಪನಿಯ ಪ್ರವರ್ತಕರಾದ ಮಿಸ್ಬಾವುದ್ದೀನ್‌ ಎಸ್‌. ಮತ್ತು ಸುಹೈಲ್‌ ಅಹ್ಮದ್ ಷರೀಫ್‌ ಅವರಿಗೆ ಸೇರಿದ ₹ 20.16 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಠೇವಣಿದಾರರಿಗೆ ವಂಚಿಸಿದ ಆರೋಪದ ಮೇಲೆ ಇಂಜಾಜ್‌ ಇಂಟರ್‌ನ್ಯಾಷನಲ್‌ ವಿರುದ್ಧ ನಗರದ ವಿಲ್ಸನ್‌ ಗಾರ್ಡನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿದ್ದ ಇ.ಡಿ ತನಿಖೆ ನಡೆಸಿತ್ತು. ಈ ಪ್ರಕರಣದಲ್ಲೂ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ಕಂಪನಿಯ ಪ್ರವರ್ತಕರು ಠೇವಣಿ ದಾರರಿಂದ ಸಂಗ್ರಹಿಸಿದ್ದ ಹಣವನ್ನು ತಮ್ಮ ಸ್ವಂತ ಹಾಗೂ ಸಹಚರರ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡಿ ಕೊಂಡಿದ್ದರು. ಆ ಮೊತ್ತವನ್ನು ವೈಯಕ್ತಿಕ ಲಾಭಕ್ಕೆ ಬಳಸಿಕೊಂಡಿದ್ದರು. ಅವರಿಗೆ ಸೇರಿದ ಫ್ಲ್ಯಾಟ್‌ಗಳು, ವಸತಿ ಉದ್ದೇಶದ ಜಮೀನುಗಳು ಮತ್ತು ಕೃಷಿಯೇತರ ಜಮೀನುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.