ADVERTISEMENT

ಕಾಲಮಿತಿಯಲ್ಲಿ ಅನುದಾನ ಬಳಕೆಗೆ ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2025, 18:05 IST
Last Updated 29 ಏಪ್ರಿಲ್ 2025, 18:05 IST
   

ಬೆಂಗಳೂರು: ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅನುದಾನಗಳನ್ನು ಕಾಲಮಿತಿಯಲ್ಲಿ ಬಳಕೆ ಮಾಡಿ, ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್‌.ಸುರೇಶ್‌ ಅವರು ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದರು.

ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಮಂಗಳವಾರ ವಿಡಿಯೊ ಸಂವಾದ ನಡೆಸಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ದೂರುಗಳು ಬಂದ ತಕ್ಷಣವೇ ಸಮಸ್ಯೆಗಳನ್ನು ಪರಿಹರಿಸಬೇಕು. ಯಾವುದೇ ಕಾರಣಕ್ಕೂ ನಾಗರಿಕರು ಇಲಾಖೆಯ ಕೇಂದ್ರ ಕಚೇರಿವರೆಗೆ ಸಮಸ್ಯೆಗಳನ್ನು ಹೊತ್ತು ತರಬಾರದು ಎಂದು ನಿರ್ದೇಶನ ನೀಡಿದರು.

ಕೇಂದ್ರದ ಯೋಜನೆಗಳ ಬಗ್ಗೆಯೂ ಗಮನಹರಿಸಬೇಕು ಮತ್ತು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಕೈಗೆತ್ತಿಕೊಂಡು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು ಎಂದು ಹೇಳಿದರು.

ADVERTISEMENT

ಪಾಲಿಕೆ ವ್ಯಾಪ್ತಿಯಲ್ಲಿನ ಕಸ ವಿಲೇವಾರಿ ಸಮಸ್ಯೆ, ರಸ್ತೆಗಳ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಯಾವುದೇ ಲೋಪವಾಗದ ರೀತಿಯಲ್ಲಿ ಕೈಗೊಳ್ಳಬೇಕು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇ–ಖಾತಾ ಸೌಲಭ್ಯವನ್ನು ಅರ್ಹ ನಾಗರಿಕರಿಗೆ ವಿತರಣೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸುರೇಶ್ ತಿಳಿಸಿದರು.

ಈ ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ, 10 ಪಾಲಿಕೆಗಳ ಆಯುಕ್ತರು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.