ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಬಗ್ಗೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಿ, ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಆಗಸ್ಟ್ 11ರಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ತಿಳಿಸಿದೆ.
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ರಾಜ್ಯ ಸಂಚಾಲಕ ಬಸವರಾಜ ಕೌತಾಳ್, ‘ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದಲ್ಲಿ ನೇಮಕವಾಗಿರುವ ಏಕಸದಸ್ಯ ಆಯೋಗವು, ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ವಸ್ತುನಿಷ್ಠ ವರದಿಯನ್ನು ಜುಲೈ 30ರೊಳಗೆ ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಒತ್ತಾಯಿಸಿದರು.
‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಬಗ್ಗೆ ತನ್ನ ಪ್ರಣಾಳಿಕೆಯಲ್ಲಿಯೇ ಭರವಸೆ ನೀಡಿತ್ತು. ಈಗಾಗಲೇ ಎರಡು ವರ್ಷ ವಿಳಂಬವಾಗಿದೆ. ಒಳ ಮೀಸಲಾತಿ ಜಾರಿಯಾದರೆ ವಿವಿಧ ಇಲಾಖೆಗಳ 30 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅನುಕೂಲವಾಗಲಿದೆ. ಆದ್ದರಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಯೋಜಿಸಲಾಗಿದೆ. ಈ ಧರಣಿಯಲ್ಲಿ ಎಲ್ಲ ಸಂಘ–ಸಂಸ್ಥೆಗಳ ಮುಖಂಡರು ಹಾಗೂ ರಾಜಕೀಯ ಪಕ್ಷಗಳ ನಾಯಕರು ಪಕ್ಷಾತೀತವಾಗಿ ಭಾಗವಹಿಸಬೇಕು’ ಎಂದು ಕರೆ ನೀಡಿದರು.
ಸಮಿತಿಯ ಸದಸ್ಯರಾದ ಅಂಬಣ್ಣ ಅರೋಲಿಕರ್, ಕರಿಯಪ್ಪ ಗುಡಿಮನಿ, ಸಣ್ಣ ಮಾರೆಪ್ಪ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.