ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಆಗಸ್ಟ್ 18ರಂದು ಬೆಳಿಗ್ಗೆ 11 ಗಂಟೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಮಾದಿಗ ದಂಡೋರ ಸಂಘಟನೆಯು ಪ್ರತಿಭಟನೆ ಹಮ್ಮಿಕೊಂಡಿದೆ.
ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಸಂಘಟನೆ ರಾಜ್ಯ ಘಟಕ ಅಧ್ಯಕ್ಷ ಬಿ. ನರಸಪ್ಪ ದಂಡೋರ, ‘ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆ.1ಕ್ಕೆ ವರ್ಷವಾಗುತ್ತದೆ. ಆದರೆ, ರಾಜ್ಯ ಸರ್ಕಾರ ವಿನಾಕಾರಣ ಒಳಮೀಸಲಾತಿ ವಿಳಂಬ ಮಾಡುತ್ತಿದೆ. ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಅವರ ನೇತೃತ್ವದ ಆಯೋಗವೂ ಮಂದಗತಿಯಲ್ಲಿ ವರದಿಯನ್ನು ತಯಾರಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಈಗಾಗಲೇ ಹರಿಯಾಣ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಈವರೆಗೂ ಒಳಮೀಸಲಾತಿ ಜಾರಿ ಮಾಡಿಲ್ಲ. ಹೀಗಾಗಿ, ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ನಮ್ಮ ಸಂಘಟನೆಯ ಮುಖ್ಯಸ್ಥ ಮಂದಕೃಷ್ಣ ಮಾದಿಗ ಉಪಸ್ಥಿತರಿರುತ್ತಾರೆ’ ಎಂದು ಹೇಳಿದರು.
ಸಂಘಟನೆಯ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಜೆ.ಎಂ. ದೇವರಾಜ್, ರಾಜ್ಯ ಘಟಕ ಉಪಾಧ್ಯಕ್ಷ ಎಸ್. ರಾಮಕೃಷ್ಣ ಮಾದಿಗ, ವೆಂಕಟೇಶ್ ಕತ್ತಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.