ಸಚಿವ ಎಚ್.ಸಿ. ಮಹದೇವಪ್ಪ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ತಡೆದರು.
ಪ್ರಜಾವಾಣಿ ಚಿತ್ರ
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿ ಮಾಡುವುದಕ್ಕೆ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ ಶುಕ್ರವಾರ ಪ್ರತಿಭಟನೆ ನಡೆಸಿತು. ಬಳಿಕ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಸಮಿತಿ ರಾಜ್ಯ ಸಂಚಾಲಕ ಬಸವರಾಜ ಕೌತಾಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಕಾರರು ಸಚಿವ ಮಹದೇವಪ್ಪ ವಿರುದ್ಧ ಘೋಷಣೆಗಳನ್ನು ಕೂಗಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
‘ಎಚ್.ಎನ್. ನಾಗಮೋಹನದಾಸ್ ಆಯೋಗವು ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗಗಳನ್ನಾಗಿ ಮಾಡಿ ಒಳ ಮೀಸಲಾತಿ ಸಂಬಂಧ ಏಳು ಶಿಫಾರಸುಗಳನ್ನು ಮಾಡಿತ್ತು. ಆದರೆ, ಸರ್ಕಾರ ಮೂರು ಪ್ರವರ್ಗಗಳನ್ನಾಗಿ ವಿಂಗಡಿಸಿ, ಪ್ರವರ್ಗ ‘ಎ’ಗೆ ಶೇಕಡ 6, ಪ್ರವರ್ಗ ‘ಬಿ’ಗೆ ಶೇ 6 ಹಾಗೂ ಪ್ರವರ್ಗ ‘ಸಿ’ಗೆ ಶೇ 5ರಷ್ಟು ಒಳ ಮೀಸಲಾತಿ ಹಂಚಿಕೆ ಮಾಡಿದೆ. ಆದರೆ, ಇದುವರೆಗೂ ಜಾರಿಗೊಳಿಸಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.
‘ಸಚಿವ ಮಹದೇವಪ್ಪ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್ ಅವರು ಸರ್ಕಾರದಿಂದ ಬಂದ ಕಡತಕ್ಕೆ ಒಪ್ಪಿಗೆ ಸೂಚಿಸಲು ಕ್ರಮ ಕೈಗೊಂಡಿಲ್ಲ. ಒಳ ಮೀಸಲಾತಿ ನೇರ ನೇಮಕಾತಿಗೆ ಮಾತ್ರ ಅನ್ವಯಿಸುತ್ತದೆ. ಬಡ್ತಿ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಅನ್ವಯಿಸುವುದಿಲ್ಲ ಎಂದು ದಾರಿ ತಪ್ಪಿಸುತ್ತಿದ್ದಾರೆ. ಸಚಿವ ಸ್ಥಾನಕ್ಕೆ ಮಹದೇವಪ್ಪ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
ಬಳಿಕ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಬಂದ ಪ್ರತಿಭಟನಕಾರರನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ತಡೆದರು. ಪ್ರತಿಭಟನಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಗಿ, ತಳ್ಳಾಟ, ನೂಕಾಟ ನಡೆಯಿತು.
ಪ್ರತಿಭಟನಕಾರರನ್ನು ವಶಕ್ಕೆ ಪಡೆದು, ಬಸ್‌ನಲ್ಲಿ ನಗರ ಸಶಸ್ತ್ರ ಮೀಸಲು ಮೈದಾನಕ್ಕೆ ಕರೆದೊಯ್ದರು. ಬಳಿಕ ಬಿಡುಗಡೆ ಮಾಡಿದರು.
‘ಒಳಮೀಸಲು ಜಾರಿ: ಗೊಂದಲ ಬೇಡ’
‘ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ಬದ್ಧವಾಗಿದೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಕೆಲವರು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮತ್ತು ಅಸ್ತಿತ್ವಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ’ ಎಂದು ಎಚ್.ಸಿ.ಮಹದೇವಪ್ಪ ಹೇಳಿದರು. ‘ಸುಪ್ರೀಂ ಕೋರ್ಟ್ ತೀರ್ಪು ನೀಡುವ ಮುನ್ನವೇ ಒಳ ಮೀಸಲಾತಿ ಜಾರಿ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಣಯಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ನಂತರ ಸುಪ್ರೀಂ ಕೋರ್ಟ್ ಆಯಾ ರಾಜ್ಯಗಳ ವಿವೇಚನೆಗೆ ನೀಡಿತು. ಆಂಧ್ರಪ್ರದೇಶ ತೆಲಂಗಾಣ ಕರ್ನಾಟಕ ಮಾತ್ರ ಒಳಮೀಸಲಾತಿ ಜಾರಿ ಮಾಡಿವೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ವರದಿಯನ್ನು ಕೆಲ ಮಾರ್ಪಾಡಿನೊಂದಿಗೆ ಅಂಗೀಕರಿಸಿ ಜಾರಿ ಮಾಡಲು ಒಪ್ಪಿಕೊಂಡಿದ್ದೇವೆ. ನೇಮಕಾತಿ ನಿರ್ಬಂಧ ತೆರವು ಮಾಡಲಾಗಿದೆ. ಬ್ಯಾಕ್ ಲಾಗ್ ಹುದ್ದೆಗಳನ್ನು ಗುರುತಿಸಿ ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಸ್ಪಷಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.