ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ದತ್ತಾಂಶ ಸಂಗ್ರಹಿಸುವ ಸಮೀಕ್ಷೆಯು ಜಿಲ್ಲೆಯಲ್ಲಿ ಮೇ 5ರಿಂದ 17ರವರೆಗೆ ನಡೆಸಲಾಗುವುದು ಎಂದು ನಗರ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ನಾಯಕ್ ತಿಳಿಸಿದರು.
ಅಧಿಕಾರಿಗಳ ಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಅಧಿಕಾರಿಗಳು ಸಮೀಕ್ಷೆ ನಡೆಯುವ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬವು ಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕುಟುಂಬದ ಉಪಜಾತಿ, ಆರ್ಥಿಕ ಮತ್ತು ಸಾಮಾಜಿಕ ಮಟ್ಟ ಸೇರಿದಂತೆ ಸಮೀಕ್ಷೆಯಲ್ಲಿ ನೀಡಲಾಗಿರುವ ಎಲ್ಲಾ ಪ್ರಶ್ನೆಗಳಿಗೆ ನಿಖರ ಉತ್ತರ ಪಡೆದು ಅಪಲೋಡ್ ಮಾಡಬೇಕಿದೆ. ಇದಕ್ಕಾಗಿ ತಾಲ್ಲೂಕು ಮಟ್ಟದಲ್ಲಿ ಸಮೀಕ್ಷೆ ನಡೆಸಲು ಗಣತಿದಾರರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.
ಗಣತಿದಾರರನ್ನಾಗಿ ಶಾಲಾ ಶಿಕ್ಷಕರನ್ನು ನೇಮಿಸಬೇಕು. ಪ್ರತಿ ಗಣತಿದಾರರ ಗುಂಪಿನ ಕೆಲಸವನ್ನು ಪರಿಶೀಲಿಸಲು ಒಬ್ಬ ಮೇಲ್ವಿಚಾರಕರನ್ನು ನೇಮಕ ಮಾಡಬೇಕು. ಮೇ 17ರ ಸಮೀಕ್ಷೆ ಮುಗಿದ ನಂತರ ಮೇ 19ರಿಂದ 21ರವರೆಗೆ ಸ್ಥಳ ನಿಗದಿ ಮಾಡಿ ವಿಶೇಷ ಶಿಬಿರವನ್ನು ನಡೆಸಲಾಗುವುದು. ಶಿಬಿರದಲ್ಲಿ ಯಾವುದೇ ಪರಿಶಿಷ್ಟ ಜಾತಿಯ ಕುಟುಂಬ ಸಮೀಕ್ಷೆಯಿಂದ ಬಿಟ್ಟುಹೋಗಿದ್ದಲ್ಲಿ, ಸಂಪರ್ಕಿಸಿ ಸಮೀಕ್ಷೆಗೆ ಒಳಗಾಗಲೂ ಅವಕಾಶ ಸಹ ನೀಡಲಾಗಿದೆ ಎಂದರು.
ಏಪ್ರಿಲ್ 28ರಂದು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಸ್ಟರ್ ತರಬೇತುದಾರರಿಂದ ತರಬೇತಿ ನೀಡಲಾಗುವುದು. ಕಂಪ್ಯೂಟರ್ ಹಾಗೂ ಸಮೀಕ್ಷೆಯ ಜ್ಞಾನವಿರುವ ಸಿಬ್ಬಂದಿಯನ್ನು ನಿಯೋಜಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಉತ್ತರ ವಿಭಾಗದ ಉಪವಿಭಾಗಾಧಿಕಾರಿ ಪ್ರಮೋದ ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಲಕ್ಷ್ಮಣ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದರಾಮಣ್ಣ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.