ವಿಶ್ವವಾಣಿ ಫೌಂಡೇಶನ್ ಹಾಗೂ ಯಲಹಂಕ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು
ಯಲಹಂಕ: ‘ಪ್ರತಿಯೊಬ್ಬ ಮಹಿಳೆಯಲ್ಲಿ ಅಗಾಧವಾದ ಶಕ್ತಿಯಿದ್ದು, ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಕಷ್ಟಗಳನ್ನು ಧೈರ್ಯದಿಂದ ಎದುರಿಸಿ ಮುನ್ನುಗ್ಗುವ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು’ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅಭಿಪ್ರಾಯಪಟ್ಟರು.
ವಿಶ್ವವಾಣಿ ಫೌಂಡೇಶನ್ ಹಾಗೂ ಯಲಹಂಕ ಕ್ಷೇತ್ರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸಿಂಗನಾಯಕನಹಳ್ಳಿಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಹಿಳೆಯರಿಗೆ ಅಗತ್ಯ ಪ್ರೋತ್ಸಾಹ ನೀಡಿದರೆ ಎಂತಹ ಸಾಧನೆಯನ್ನೂ ಮಾಡುತ್ತಾರೆ ಎಂಬುದಕ್ಕೆ ಹಲವಾರು ನಿದರ್ಶನಗಳು ನಮ್ಮ ಕಣ್ಮುಂದಿವೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ವತಿಯಿಂದ ಸ್ತ್ರೀಶಕ್ತಿ ಗುಂಪುಗಳ ಸದಸ್ಯರಿಗೆ ಸಾಲ ಸೌಲಭ್ಯದ ಚೆಕ್ ವಿತರಿಸಲಾಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಆರೋಗ್ಯ ಶಿಬಿರ: ಸ್ತನ ಕ್ಯಾನ್ಸರ್ ಸ್ಕ್ರೀನಿಂಗ್, ಅಗತ್ಯವಿರುವವರಿಗೆ ಶಸ್ತ್ರಚಿಕಿತ್ಸೆ, ಮಣಿಪಾಲ್ ಆಸ್ಪತ್ರೆಯ ಸಹಯೋಗದೊಂದಿಗೆ ಕಣ್ಣಿನ ತಪಾಸಣೆ ಮತ್ತು ಕಣ್ಣಿನಪೊರೆ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಮಧುಮೇಹ, ರಕ್ತದೊತ್ತಡ ಸೇರಿ ಸಾಮಾನ್ಯ ಕಾಯಿಲೆಗಳ ತಪಾಸಣೆಯ ಜೊತೆಗೆ ಉಚಿತವಾಗಿ ಔಷಧ ವಿತರಿಸಲಾಯಿತು.
ವಸ್ತುಪ್ರದರ್ಶನ: ಸ್ವಸಹಾಯ ಗುಂಪುಗಳ ಸದಸ್ಯರು ತಯಾರಿಸಿದ ಆಹಾರ ಉತ್ಪನ್ನಗಳು ಮತ್ತು ವಿವಿಧ ಗೃಹಪಯೋಗಿ ಸಾಧನ, ಸಲಕರಣೆಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿತ್ತು.
ಸಿಂಗನಾಯಕನಹಳ್ಳಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷೆ ವಾಣಿಶ್ರೀ ವಿಶ್ವನಾಥ್, ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಮಂಜುಳಾ ಮಹೇಂದ್ರ, ಹೇಮಲತಾ ಚಿದಾನಂದ್, ಬಿಜೆಪಿ ಮುಖಂಡರಾದ ಅಲೋಕ್ ವಿಶ್ವನಾಥ್, ಸತೀಶ್ ಕಡತನಮಲೆ, ಚೊಕ್ಕನಹಳ್ಳಿ ವೆಂಕಟೇಶ್, ರಾಮಮೂರ್ತಿ, ಎಂ.ಮಂಜುನಾಥ್, ಎಸ್.ಜಿ.ಪ್ರಶಾಂತ್‌ರೆಡ್ಡಿ, ಮುರಾರಿರಾಮು, ಈಶ್ವರ್, ಪವನ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.