ADVERTISEMENT

ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್‌ ನಕಾರ

ಕಾನೂನು ವಿದ್ಯಾರ್ಥಿನಿ ಮೇಲೆ ಹಲ್ಲೆ ಆರೋಪ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 19:05 IST
Last Updated 22 ಏಪ್ರಿಲ್ 2022, 19:05 IST
   

ಬೆಂಗಳೂರು: ‘ಕಾನೂನು ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ಆರೋಪದಡಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸಬೇಕು’ ಎಂದು ಕೋರಿದ್ದ ವಕೀಲರೊಬ್ಬರ ಮನವಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ.

‘ನನ್ನ ವಿರುದ್ಧ ಹಲಸೂರು ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾಗಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ವಕೀಲ ಜೆ. ವಸಂತ್ ಆದಿತ್ಯ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

‘ಪ್ರಕರಣ ತನಿಖಾ ಹಂತದಲ್ಲಿರುವಾಗ ಸಿಆರ್‌ಪಿಸಿ ಕಲಂ 482ರ ಅಡಿಯಲ್ಲಿ ಪರಿಹಾರ ನೀಡಲಾಗದು’ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ‘ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಅರ್ಜಿದಾರ ವಕೀಲರನ್ನು ಠಾಣೆಗೆ ಕರೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿ’ ಎಂದು ಹೇಳಿದೆ.

ADVERTISEMENT

ಆರೋಪವೇನು: ‘ಇಂಟರ್ನ್‌ಶಿಪ್‌ ಪೂರೈಸಿದ ಬಳಿಕ ಪ್ರಮಾಣಪತ್ರ ನೀಡುವಂತೆ ಕೇಳಿದಾಗ ವಸಂತ್‌ ಆದಿತ್ಯ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ವಾಟ್ಸ್‌ ಆ್ಯಪ್‌ನಲ್ಲೂ ನಿಂದನೀಯ ಸಂದೇಶ ಕಳುಹಿಸಿದ್ದಾರೆ’ ಎಂದು ದೂರುದಾರ ವಿದ್ಯಾರ್ಥಿನಿ ಆರೋಪಿಸಿದ್ದರು. ಈ ಕುರಿತಂತೆ ಹಲಸೂರು ಪೊಲಿಸರು,ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 67 ಹಾಗೂ ಐಪಿಸಿ ಕಲಂ 324, 354, 341, 506, 509ರಅಡಿ ಎಫ್ಐಆರ್ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.