ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್‌ಸಿಎ) ಹಾಗೂ ಡಿಎನ್‌ಎ (ಇ–ವೆಂಟ್ ಮ್ಯಾನೇಜ್‌ಮೆಂಟ್) ಸಿಬ್ಬಂದಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರ ಎದುರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದರು.
ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮ್ಯಾಜಿಸ್ಟೀರಿಯಲ್ ತನಿಖೆ ನಡೆಯುತ್ತಿದ್ದು, ಹಲವರ ವಿಚಾರಣೆ ನಡೆಸಲಾಗುತ್ತಿದೆ.
ಕೆಎಸ್‌ಸಿಎ, ಆರ್‌ಸಿಬಿ, ಡಿಎನ್‌ಎ ಸಿಬ್ಬಂದಿ ಮತ್ತು ಅಮಾನತುಗೊಂಡಿರುವ ಬಿ.ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್, ಆರ್‌ಸಿಬಿ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಮತ್ತು ಡಿಎನ್‌ಎ ಸಿಬ್ಬಂದಿ ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಪ್ರತ್ಯೇಕವಾಗಿ ವಿಚಾರಣೆ ನಡೆಸಿ, ಅವರ ಹೆಳಿಕೆ ದಾಖಲು ಮಾಡಿಕೊಳ್ಳಲಾಗಿದೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.
ನಗರ ಪೊಲೀಸ್ ಆಯುಕ್ತರಾಗಿದ್ದ ಬಿ.ದಯಾನಂದ ವಿಚಾರಣೆಗೆ ಗೈರಾಗಿದ್ದರು. ಸಿಐಡಿ ವಿಚಾರಣೆ ಇರುವ ಕಾರಣಕ್ಕೆ ವಿಚಾರಣೆಗೆ ಕಾಲಾವಕಾಶ ನೀಡುವಂತೆ ತಮ್ಮ ವಕೀಲರ ಮೂಲಕ ದಯಾನಂದ ಅವರು ಜಿಲ್ಲಾಧಿಕಾರಿ ಬಳಿ ಮನವಿ ಮಾಡಿದ್ದರು ಎಂದು ಗೊತ್ತಾಗಿದೆ.
ಇದೇ ಘಟನೆಗೆ ಸಂಬಂಧಿಸಿದಂತೆ ಕಬ್ಬನ್‌ಪಾರ್ಕ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಸಿಐಡಿ ಎಸ್‌ಪಿ ಶುಭನ್ವಿತಾ ಎದುರು ಶುಕ್ರವಾರ ಹಾಜರಾಗಿ ಹೇಳಿಕೆ ದಾಖಲಿಸಿದರು ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.