ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಪ್ರಜಾವಾಣಿ ಚಿತ್ರ
ಬೆಂಗಳೂರು: ಕರ್ನಾಟಕದ ಯಾವುದಾದರೂ ಒಂದು ವಿಶ್ವವಿದ್ಯಾಲಯದಲ್ಲಿ ಅಮರಶಿಲ್ಪಿ ಜಕಣಾಚಾರಿ ಹೆಸರಿನಲ್ಲಿ ಅಧ್ಯಯನ ಪೀಠ ಆರಂಭಿಸುವ ಕುರಿತು ಮುಂದಿನ ಬಜೆಟ್‌ನಲ್ಲಿ ಪ್ರಕಟಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ರಾಜಣ್ಣ ಒತ್ತಾಯಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬುಧವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವಕರ್ಮ ಸಮುದಾಯದಲ್ಲೂ ಸಾಧನೆಗೈದವರು ಇದ್ದಾರೆ. ಅಂತಹವರಿಗೂ ಪ್ರತಿಷ್ಠಿತ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲು ರಾಜ್ಯ ಸರ್ಕಾರ ಮುಂದಾಗಬೇಕು. ವಿಶ್ವಕರ್ಮ ಜಯಂತಿ ಬದಲು ವಿಶ್ವಕರ್ಮ ಪೂಜಾ ಮಹೋತ್ಸವನ್ನಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮಾತನಾಡಿ, ‘ಜಕಣಾಚಾರಿ ಅವರ ಹೆಸರಿನಲ್ಲೂ ಅಧ್ಯಯನ ಪೀಠ ಸ್ಥಾಪಿಸಬೇಕೆಂಬ ಬೇಡಿಕೆಗೆ ಪೂರಕವಾಗಿ ನಿಯೋಗ ಬರುವುದಾದರೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡೋಣ’ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಸಾಕಷ್ಟು ಅಧ್ಯಯನ ಪೀಠಗಳು ಸ್ಥಾಪನೆಗೊಂಡಿದ್ದರೂ ಕೆಲವು ಹೆಸರಿಗಷ್ಟೇ ಸಿಮೀತವಾಗಿವೆ. ಅಧ್ಯಯನ ಪೀಠಗಳ ಬಗ್ಗೆ ಸಮಗ್ರ ಯೋಜನೆ ಸರ್ಕಾರಕ್ಕೆ ಸಲ್ಲಿಸುವ ಕೆಲಸವೂ ಆಗಬೇಕಿದೆ ಎಂದು ಸಲಹೆ ನೀಡಿದರು.
ಹಾಸನ ಜಿಲ್ಲೆ ವಿಶ್ವಕರ್ಮ ಪೀಠ ಅರೆಮಾದನಹಳ್ಳಿ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನಮಠದ ವಿಭೂಷಿತ ಶಿವಸುಜ್ಞಾನತೀರ್ಥ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿ ಕೆ.ಎಸ್.ಪ್ರಭಾಕರ್, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಆರ್. ಶ್ರೀನಿವಾಸಾಚಾರ್, ಬಿ.ಪಿ.ಸತ್ಯವತಿ, ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಪಿ. ಈರಣ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ.ಗಾಯತ್ರಿ, ಜಂಟಿ ನಿರ್ದೇಶಕ ಬಲವಂತರಾವ್ ಪಾಟೀಲ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.