ADVERTISEMENT

‘ಜನಾಕ್ರೋಶ ಯಾತ್ರೆ' ತಡೆಗೆ ಬಿಜೆಪಿ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 19:08 IST
Last Updated 10 ಜೂನ್ 2025, 19:08 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ಬೆಂಗಳೂರು: ಬ್ಯಾಟರಾಯನಪುರ ಕ್ಷೇತ್ರದ ಅಭಿವೃದ್ದಿ ಕಡೆಗಣಿಸಿರುವುದರ ವಿರುದ್ಧ ಮಂಗಳವಾರ ಹಮ್ಮಿಕೊಂಡಿದ್ದ ‘ಬ್ಯಾಟರಾಯನಪುರ ಜನಾಕ್ರೋಶ ಯಾತ್ರೆ’ ತಡೆದಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೇಶ್ ಗೌಡ ಖಂಡಿಸಿದ್ದಾರೆ.

‘ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ, ತೆರಿಗೆ ಹೆಚ್ಚಳ, ದುರಾಡಳಿತ, ಭ್ರಷ್ಟಾಚಾರ, ಸ್ವಜನಪಕ್ಷಪಾತದ ವಿರುದ್ಧ ಜೂನ್‌ 10ರಂದು ‘ಬ್ಯಾಟರಾಯನಪುರ ಜನಾಕ್ರೋಶ ಯಾತ್ರೆ'ಯ ಹೆಸರಿನಲ್ಲಿ, ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕುರಿತು ಸ್ಥಳೀಯ ಬಿಬಿಎಂಪಿ ಕಚೇರಿಗೆ ಮನವಿ ಸಲ್ಲಿಸಲು ತೆರಳುವಾಗ, ಪೊಲೀಸರು ಹಾಗೂ ಕೆಲವು ಅಧಿಕಾರಿಗಳು ತಡೆದಿದ್ದಾರೆ’ ಎಂದು ಅವರು ಹೇಳಿದರು.

ADVERTISEMENT

‘ಜನಸಾಮಾನ್ಯರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕುವ ಪ್ರಯತ್ನವಾಗಿದೆ. ಈ ಮೂಲಕ ಜನರ ಸಮಸ್ಯೆಗಳನ್ನು ಸರ್ಕಾರಕ್ಕೆ ತಿಳಿಸದಂತೆ ತಡೆಹಿಡಿಯುವ ವ್ಯವಸ್ಥಿತ ತಂತ್ರ ನಡೆಸಲಾಗುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಕ್ಷೇತ್ರದ ಶಾಸಕರು ಜನಸಾಮಾನ್ಯರ ಆಕ್ರೋಶವನ್ನು ಕೇಳಿಸಿಕೊಳ್ಳಲು ಸಿದ್ಧರಿಲ್ಲವೇ? ಅಥವಾ ಕೇಳಿಸಿಕೊಳ್ಳುವುದರಿಂದ ತಪ್ಪಿಸಿಕೊಳ್ಳಲು ಹೀಗೆಲ್ಲ ಷಡ್ಯಂತ್ರ ಮಾಡಲಾಗುತ್ತಿದೆಯೇ? ಎಂಬುದು ಸೇರಿದಂತೆ ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ. ಶಾಸಕರು ಇವುಗಳಿಗೆಲ್ಲ ಉತ್ತರಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

’ಹೀಗೆ ಪ್ರಶ್ನಿಸಿದ್ದಕ್ಕೆ ನನ್ನನ್ನು ಹಾಗೂ ಸ್ಥಳೀಯ ಬಿಜೆಪಿ ಮುಖಂಡರನ್ನು ಸ್ಥಳೀಯ ಪೊಲೀಸ್ ಅಧಿಕಾರಿಗಳನ್ನು ಬಳಸಿಕೊಂಡು ಗೃಹಬಂಧನದಲ್ಲಿ ಇರಿಸಲಾಗಿದೆ. ಶಾಸಕರ ಈ ಸರ್ವಾಧಿಕಾರಿ ಧೋರಣೆಯನ್ನು ನಾವೆಲ್ಲರೂ ಖಂಡಿಸುತ್ತೇವೆ. ಈ ರೀತಿಯ ಗೊಡ್ಡು ಬೆದರಿಕೆಗಳಿಗೆ ನಾವು ಹೆದರುವುದಿಲ್ಲ. ಹಿಂದೆ ಸರಿಯುವುದೂ ಇಲ್ಲ ಎಂದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.