ADVERTISEMENT

ಜಯದೇವ ಆಸ್ಪತ್ರೆ ವೈದ್ಯರಿಗೂ ಕೊರೊನಾ ಸೋಂಕು

8 ವೈದ್ಯರು, 15 ಶುಶ್ರೂಷಕರು, ಇಬ್ಬರು ಸಹಾಯಕರು ಕ್ವಾರಂಟೈನ್‌

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 4:12 IST
Last Updated 23 ಜೂನ್ 2020, 4:12 IST
   

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ 32 ವರ್ಷದ ವೈದ್ಯರೊಬ್ಬರಿಗೆ ಕೊರೊನ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ. ಅವರ ಜೊತೆ ನೇರ ಸಂಪರ್ಕ ಹೊಂದಿದ್ದ ಎಂಟು ವೈದ್ಯರು, 15 ಶುಶ್ರೂಷಕರು ಹಾಗೂ ಇಬ್ಬರು ಸಹಾಯಕ ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ.

‘ಸೋಂಕು ದೃಢಪಟ್ಟ ವೈದ್ಯರು ಹೊರರೋಗಿಗಳ ವಿಭಾಗದಲ್ಲಿ (ಒಪಿಡಿ) ಕರ್ತವ್ಯ ನಿರ್ವಹಿಸುತ್ತಿದ್ದರು.ಅವರಿಗೆ ಇತ್ತೀಚೆಗೆ ಶೀತ ಜ್ವರದ ಲಕ್ಷಣ ಕಾಣಿಸಿಕೊಂಡಿತ್ತು. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ಅವರು ಗಂಟಲ ದ್ರವವನ್ನು ಪರೀಕ್ಷೆ ಮಾಡಿಸಿಕೊಂಡಿದ್ದರು. ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಆ ವೈದ್ಯರು ಜೂನ್‌ 15ರಿಂದ ಕರ್ತವ್ಯಕ್ಕೆ ಹಾಜರಾಗಿಲ್ಲ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಹೊರರೋಗಿಗಳ ವಿಭಾಗದವನ್ನು ಸೋಂಕು ನಿವಾರಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದೆ. ಅವರ ಜೊತೆ ನೇರ ಸಂಪರ್ಕ ಹೊಂದಿದ್ದ ಸಂಸ್ಥೆಯ ವೈದ್ಯರು ಸೇರಿದಂತೆ 25 ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಆದರೆ, ಸಂಸ್ಥೆಯು ಎಲ್ಲ ಸೇವೆಗಳನ್ನೂ ಮುಂದುವರಿಸಿದೆ. ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿಲ್ಲ. ಸೋಮವಾರವೂ ಸುಮಾರು 800 ಮಂದಿಗೆ ಚಿಕಿತ್ಸೆ ನೀಡಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.