ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಮೇ 20ರಂದು ಹಮ್ಮಿಕೊಂಡಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸಲು ಏಪ್ರಿಲ್ 16ರಿಂದ ಮೇ 10ರೊಳಗೆ ಜಿಲ್ಲಾ ಮಟ್ಟದಲ್ಲಿ ಜಂಟಿ ಸಮಾವೇಶ ನಡೆಸಲು ಜಿಸಿಟಿಯು ನಿರ್ಧರಿಸಿದೆ.
ನಗರದಲ್ಲಿ ಮಂಗಳವಾರ ನಡೆದ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜಿಸಿಟಿಯು)ಯ ರಾಜ್ಯ ಮಟ್ಟದ ಸಮಾವೇಶದಲ್ಲಿ ಆರು ತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಕಾರ್ಮಿಕ ಸಂಹಿತೆಗಳನ್ನು ಘೋಷಿಸಿದ ಮರುದಿನವೇ ಪ್ರತಿಭಟನೆಗಳನ್ನು ಆಯೋಜಿಸುವುದು, ರಾಜ್ಯವ್ಯಾಪಿ ಜಂಟಿ ಮುಷ್ಕರದ ನೋಟಿಸ್‌ಗಳನ್ನು ಮೇ 3ರಂದು ಸರ್ಕಾರಕ್ಕೆ ನೀಡುವುದು, ಮೇ 1ರಂದು ತಾಲ್ಲೂಕು ಹಾಗೂ ಕೈಗಾರಿಕಾ ಪ್ರದೇಶಗಳಲ್ಲಿ ಕಾರ್ಮಿಕ ದಿನಾಚರಣೆ ನಡೆಸುವುದು. ಅಲ್ಲದೇ ಏಪ್ರಿಲ್, ಮೇ ತಿಂಗಳಲ್ಲಿ ಎಲ್ಲ ವರ್ಗದ ಕಾರ್ಮಿಕರು ಹಾಗೂ ಜನಸಾಮಾನ್ಯರ ನಡುವೆ ಮುಷ್ಕರದ ಕುರಿತು ಪ್ರಚಾರ ನಡೆಸುವುದು ಮತ್ತು ಸಾರ್ವತ್ರಿಕ ಮುಷ್ಕರ ಯಶಸ್ಸಿಗೆ ಶ್ರಮಿಸಲು ನಿರ್ಧರಿಸಲಾಗಿದೆ.
ಸಿಐಟಿಯು ರಾಜ್ಯ ಮಂಡಳಿ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ‘ರಾಜ್ಯದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಅಂಬೇಡ್ಕರ್ ಸಹಾಯ ಹಸ್ತ ಯೋಜನೆಯಡಿ ಕೇವಲ ವಿಮಾ ಯೋಜನೆ ಜಾರಿ ಮಾಡಲಾಗಿದೆ. ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಭಾಗವಾಗಿ ಪಿಂಚಣಿ ಯೋಜನೆ ರೂಪಿಸಬೇಕು. ಅದಕ್ಕೆ ಅಗತ್ಯವಾದ ಅನುದಾನವನ್ನು ಬಜೆಟ್‌ನಲ್ಲಿ ನೀಡಬೇಕು’ ಎಂದು ಆಗ್ರಹಿಸಿದರು.
ಎಐಟಿಯುಸಿ ರಾಜ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಮಾತನಾಡಿ, ‘ಅನ್ಯಾಯದ ವಿರುದ್ಧ ಕಾರ್ಮಿಕರು, ರೈತರು, ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ಮತ್ತು ಬುದ್ಧಿಜೀವಿಗಳು ಐಕ್ಯತೆಯಿಂದ ಕೆಲಸ ಮಾಡಬೇಕಾಗಿದೆ. ರಾಷ್ಟ್ರೀಯ ಆಸ್ತಿಗಳ ಲೂಟಿ ತಡೆಯಬೇಕಿದೆ’ ಎಂದು ಕರೆ ನೀಡಿದರು.
ಸಮಾವೇಶದಲ್ಲಿ ಎಐಟಿಯುಸಿಯ ವೀರೇಶ್, ಟಿಯುಸಿಸಿಯ ಜಿ.ಆರ್. ಶಿವಶಂಕರ್, ಎಚ್‌ಎಂಕೆಪಿ ಪ್ರಧಾನ ಕಾರ್ಯದರ್ಶಿ ಕಾಳಪ್ಪ, ಜೆಸಿಟಿಯು ರಾಜ್ಯ ಸಂಚಾಲಕ ಕೆ.ವಿ.ಭಟ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.