
ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನೂರಾರು ಉದ್ಯೋಗ ಆಕಾಂಕ್ಷಿಗಳು ಬುಧವಾರ ಪ್ರತಿಭಟನೆ ನಡೆಸಿದರು
– ಪ್ರಜಾವಾಣಿ ಚಿತ್ರ
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ವಿದ್ಯಾರ್ಥಿ ಸಂಘಟನೆಯ ನೇತೃತ್ವದಲ್ಲಿ ನೂರಾರು ಉದ್ಯೋಗ ಆಕಾಂಕ್ಷಿಗಳು ಬುಧವಾರ ಪ್ರತಿಭಟನೆ ನಡೆಸಿದರು.
ಖಾಲಿ ಹುದ್ದೆಗಳನ್ನು ಭರ್ತಿ ಮಾಡದ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಐದು ವರ್ಷಗಳಿಂದ ರಾಜ್ಯದಲ್ಲಿ ಯಾವುದೇ ನೇಮಕಾತಿ ನಡೆದಿಲ್ಲ. ಉದ್ಯೋಗ ಆಕಾಂಕ್ಷಿಗಳ ವಯೋಮಿತಿ ಮೀರುತ್ತಿದೆ ಎಂದು ಪ್ರತಿಭಟನಕಾರರು ಆತಂಕ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 2.84 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದೂ ಆಗ್ರಹಿಸಿದರು.
ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರು ಸರ್ಕಾರಿ ನೌಕರಿ ಪಡೆದುಕೊಳ್ಳಬೇಕೆಂಬ ನಿರೀಕ್ಷೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾರೆ. ಆದರೆ, ನೇಮಕಾತಿಗೆ ಅಧಿಸೂಚನೆಯನ್ನೇ ಹೊರಡಿಸದ ಕಾರಣ ಆಕಾಂಕ್ಷಿಗಳು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಪ್ರತಿಭಟನಕಾರರು ನೋವು ತೋಡಿಕೊಂಡರು.
‘600 ಪಿಎಸ್ಐ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದ್ದು, ನೇಮಕಾತಿ ಆರಂಭಿಸಬೇಕು. ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಬೇಕು. ದೈಹಿಕ ಶಿಕ್ಷಣ ಶಿಕ್ಷಕರು, ಕಂಪ್ಯೂಟರ್ ಆಪರೇಟರ್, ವಾರ್ಡನ್ ಹುದ್ದೆಗಳಿಗೂ ನೇಮಕಾತಿ ಆರಂಭಿಸಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ವಯೋಮಿತಿಯನ್ನು (ಎಸ್‌ಸಿ/ಎಸ್‌ಟಿ/ಒಬಿಸಿ/ 33 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷ) ನಿಗದಿಗೊಳಿಸಬೇಕು. ಪ್ರತಿ ವರ್ಷ ಎಲ್ಲ ಇಲಾಖೆಯಲ್ಲೂ ನೇಮಕಾತಿ ನಡೆಯುವಂತೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಕೋರಿದರು.
ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಮಾತನಾಡಿ, ‘ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಬಡ ವಿದ್ಯಾರ್ಥಿಗಳನ್ನು ಬೀದಿ ಪಾಲು ಮಾಡಲಾಗಿದೆ. ಹೈಕೋರ್ಟ್ ಸೂಚನೆಯಂತೆ ಖಾಲಿಯಿರುವ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಬೇಕು. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಎಚ್ಚರಿಸಿದರು.
ನಿವೃತ್ತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಪಾಲ್ಗೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳ ಉದ್ಯೋಗ ಆಕಾಂಕ್ಷಿಗಳು ಹಾಜರಿದ್ದರು.
ವಿದ್ಯಾರ್ಥಿಗಳ ಜೀವನವನ್ನು ಹಾಳು ಮಾಡುವ ಸರ್ಕಾರ ರಾಜ್ಯದಲ್ಲಿದೆ. ನೇಮಕಾತಿಗೆ ಕ್ರಮ ತೆಗೆದುಕೊಳ್ಳುವಂತೆ ಮುಂದಿನ ಅಧಿವೇಶನದಲ್ಲಿ ಧ್ವನಿ ಎತ್ತಲಾಗುವುದುಎನ್. ರವಿಕುಮಾರ್ ವಿರೋಧ ಪಕ್ಷದ ಮುಖ್ಯ ಸಚೇತಕ ವಿಧಾನಪರಿಷತ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.