ADVERTISEMENT

ಆಸ್ಪತ್ರೆಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕ ಅಳವಡಿಕೆ

ಸಚಿವ ಡಾ.ಕೆ. ಸುಧಾಕರ್ ಮಾಹಿತಿ * ಕಿಮ್ಸ್‌ ಆಸ್ಪತ್ರೆಗೆ ದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 19:37 IST
Last Updated 18 ಆಗಸ್ಟ್ 2020, 19:37 IST

ಬೆಂಗಳೂರು: ‘ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಲಿಕ್ವಿಡ್ ಆಕ್ಸಿಜನ್ ಘಟಕಗಳನ್ನು ಅಳವಡಿಸಿ, ಅಗತ್ಯಕ್ಕೆ ತಕ್ಕಂತೆ ಆಮ್ಲಜನಕ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಗರದ ಕೆಂಪೇಗೌಡ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ (ಕಿಮ್ಸ್) ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಲಿಂಡರ್ ಸರಬರಾಜು ಆಗದ ಪರಿಣಾಮ ರೋಗಿಗಳಿಗೆ ಸೋಮವಾರ ರಾತ್ರಿ ಆಮ್ಲಜನಕದ ಕೊರತೆ ಉಂಟಾಗಿ, 20ಕ್ಕೂ ಅಧಿಕ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಹೀಗಾಗಿ ಕಿಮ್ಸ್‌ಗೆ ಮಂಗಳವಾರ ಭೇಟಿ ನೀಡಿದ ಸುಧಾಕರ್, ಘಟನೆಯ ಬಗ್ಗೆ ಹಾಗೂ ಆಸ್ಪತ್ರೆಯಲ್ಲಿನ ಸೌಕರ್ಯದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆಕ್ಸಿಜನ್ ಸಂಬಂಧ ಕಿಮ್ಸ್ ಆಸ್ಪತ್ರೆಯು ಖಾಸಗಿ ಕಂಪನಿಯ ಜತೆಗೆ ಒಪ್ಪಂದ ಮಾಡಿಕೊಂಡಿದೆ.ಅಗತ್ಯಕ್ಕೆ ತಕ್ಕಷ್ಟು ಆಕ್ಸಿಜನ್ ಸರಬರಾಜು ಮಾಡುವಂತೆ ಕಂಪನಿಗೆ ಸೂಚಿಸಲಾಗಿದೆ. ಈ ಕುರಿತು ಕೈಗಾರಿಕಾ ಇಲಾಖೆಯ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಿದ್ದೇನೆ‘ ಎಂದರು.

ADVERTISEMENT

‘ಆಸ್ಪತ್ರೆಯ ಲೋಪದಿಂದ ಆಮ್ಲಜನಕದ ಕೊರತೆ ಉಂಟಾಗಿಲ್ಲ. ಬೇಡಿಕೆ ಹೆಚ್ಚಾಗಿರುವುದರಿಂದ ಪೂರೈಕೆದಾರರಿಗೆ ಸರಬರಾಜು ಮಾಡಲು ಕಷ್ಟವಾಗಿದೆ. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಬೇಕಾಗಬಹುದು ಎಂದು ಯಾರೂ ಅಂದಾಜು ಮಾಡಿರಲಿಲ್ಲ. ಆಸ್ಪತ್ರೆಯ ಆಕ್ಸಿಜನ್‌ ಘಟಕ2,400 ಘನ ಮೀಟರ್‌ನಷ್ಟು ಸಾಮರ್ಥ್ಯ ಹೊಂದಿದೆ. ಆದರೆ, ಅರ್ಧ ಟ್ಯಾಂಕ್ ಮಾತ್ರ ಆಮ್ಲಜನಕ ಸರಬರಾಜು ಆಗುತ್ತಿದೆ. ಲಿಕ್ವಿಡ್ ಘಟಕಗಳನ್ನು ಬೇರೆ ರಾಜ್ಯಗಳಿಂದ ಖರೀದಿಸಿ, ಆಸ್ಪತ್ರೆಗಳಿಗೆಅಳವಡಿಸಲಾಗುವುದು. ಈ ಘಟಕಗಳ ದರ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.