ಬೆಂಗಳೂರು: ಕಲಾಸಿಪಾಳ್ಯದ ಬಿಎಂಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಬಳಿ ಸ್ಫೋಟಕ ವಸ್ತುಗಳು ಪತ್ತೆಯಾಗಿದ್ದ ಪ್ರಕರಣದ ತನಿಖೆಗೆ ಆರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ವಿಭಾಗದ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ನಿಲ್ದಾಣದ ಎಟಿಎಸ್ ಮಲ್ಲಪ್ಪ ಅವರು ದೂರು ನೀಡಿದ್ದರು.
ಚೀಲದಲ್ಲಿ ಆರು ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ ಪತ್ತೆ ಆಗಿದ್ದವು. ಬುಧವಾರ ಮಧ್ಯಾಹ್ನ ಸ್ಥಳಕ್ಕೆ ಕಲಾಸಿಪಾಳ್ಯ ಠಾಣೆಯ ಪೊಲೀಸರು, ಬಾಂಬ್ ತಪಾಸಣೆ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ನಡೆಸಿ ಜಿಲೆಟಿನ್ ಕಡ್ಡಿ ಹಾಗೂ ಡಿಟೊನೇಟರ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದರು.
‘ಕ್ವಾರಿಗಳಿಗೆ ಬಳಸಲು ಜಿಲೆಟಿನ್ ಕಡ್ಡಿಗಳನ್ನು ಕೊಂಡೊಯ್ಯುತ್ತಿರುವಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಆರೋಪಿಯ ಪತ್ತೆಗಾಗಿ ತನಿಖೆ ನಡೆಸಲಾಗುತ್ತಿದೆ. ಬಿಎಂಟಿಸಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲ ಜಂಕ್ಷನ್‌ಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದೆ. ವ್ಯಕ್ತಿಯೊಬ್ಬ ಬಂದು ಶೌಚಾಲಯದ ಹೊರಭಾಗದಲ್ಲಿ ಚೀಲವನ್ನು ಇಟ್ಟು ಹೋಗಿರುವುದು ಕಂಡುಬಂದಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.