ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಜನರು 371 ‘ಜೆ’ ಅನ್ವಯ ಶೈಕ್ಷಣಿಕ ಸೌಲಭ್ಯಗಳನ್ನು ಅರ್ಹರು ಪಡೆಯುತ್ತಿದ್ದಾರೆ. ಆದರೆ, ಉದ್ಯೋಗದ ಸೌಲಭ್ಯ ಬಳಸಿಕೊಳ್ಳುವಲ್ಲಿ ಹಿಂದೆ ಬಿದ್ದಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸಲು ಕಾರ್ಯಾಗಾರ ನಡೆಸಬೇಕಾದ ಅಗತ್ಯವಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸಲಹೆ ನೀಡಿದರು.
ಕಲ್ಯಾಣ ಕರ್ನಾಟಕ ನಿವಾಸಿಗಳ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಸಂಘ ಹಮ್ಮಿಕೊಂಡಿದ್ದ ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ಹುದ್ದೆಗಳು ಖಾಲಿ ಇವೆ. ಉದ್ಯೋಗವನ್ನು ಒದಗಿಸಲು ಸರ್ಕಾರವು ಪ್ರಯತ್ನಿಸುತ್ತಿದೆ. ಆದರೆ, ರಾಜಕೀಯವಾಗಿ ಇನ್ನೂ ಹೆಚ್ಚಿನ ಇಚ್ಛಾಶಕ್ತಿ ಅಗತ್ಯವಿದೆ. ಉದ್ಯೋಗ ಪಡೆಯಲು ಅರ್ಜಿ ಸಲ್ಲಿಸುವಾಗ ಸರಿಯಾದ ಮಾಹಿತಿ ನೀಡಬೇಕು. ಈ ಬಗ್ಗೆ ಮೊದಲು ಅರಿವು ಮೂಡಿಸಬೇಕು ಎಂದು ಹೇಳಿದರು.
ಸಂಘದ ಕಾರ್ಯಾಧ್ಯಕ್ಷ ಸಂಗಮೇಶ ಬಾದವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಹೋರಾಟ ನಡೆಸಿದಂತೆ ಈಗ ವಿಶೇಷ ಸ್ಥಾನಮಾನದ (371 ಜೆ) ಮೀಸಲಾತಿ ಸೌಲಭ್ಯವನ್ನು ಪಡೆಯಲು ಹೋರಾಟ ನಡೆಸಬೇಕಾಗಿದೆ. ಅನೇಕ ಗೊಂದಲಗಳು ಉಂಟಾಗಿರುವುದರಿಂದ ಸರ್ಕಾರಿ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ’ ಎಂದು ತಿಳಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಅಭಿಜಿತ್ ಪಾಟೀಲ, ಡಾ. ಸವಿತಾ ಸಿ., ಗುಡೂರು ಭೀಮಸೇನ, ಎ.ಹನುಮಂತ, ಚನ್ನಬಸಪ್ಪ ಬಳಿಗಾರ, ಹುಸೇನಸಾಬ್ ಕನಕಗಿರಿ, ಸುಭಾಷ ಬಣಗಾರ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಚಂದ್ರಕಾಂತ ಭಂಡಾರೆ ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಸತೀಶ ಕುಲಕರ್ಣಿ, ಸಂಘದ ಹಿರಿಯ ಉಪಾಧ್ಯಕ್ಷ ವೈಜನಾಥ ಪಾಟೀಲ, ಪ್ರಧಾನ ಕಾರ್ಯದರ್ಶಿ ಶರಣಪ್ಪ ಕಾಡಾದಿ, ಖಜಾಂಚಿ ಶಂಕರಪ್ಪ ವಜ್ರ, ಜಂಟಿ ಕಾರ್ಯದರ್ಶಿ ಭುವನೇಶ್ವರಿ ಗೋಟೆ, ಜಡೇಮೂರ್ತಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.