
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ನ ಚಟುವಟಿಕೆಗಳು ಮುಂದುವರಿಯುವಂತೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಘಟಕಗಳ ಅಧ್ಯಕ್ಷರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಸಂಬಂಧ ಬೆಂಗಳೂರು ನಗರ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪ್ರಕಾಶ ಮೂರ್ತಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದಿರುವ ಪತ್ರ ಬರೆದಿದ್ದು, 11 ಜಿಲ್ಲಾ ಘಟಕಗಳ ಅಧ್ಯಕ್ಷರು ಇದಕ್ಕೆ ಸಹಿ ಮಾಡಿದ್ದಾರೆ .
ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳು ನಡೆಯುವಂತೆ ಅನುದಾನ ಬಿಡುಗಡೆ ಮಾಡಬೇಕು ಹಾಗೂ ಬಾಕಿ ಇರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈಗಾಗಲೇ ಘೋಷಣೆಯಾಗಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಕಾರ್ಯಕಾರಿ ಸಮಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದು, ಇದೇ ಆರ್ಥಿಕ ವರ್ಷದಲ್ಲಿ ಸಮ್ಮೇಳನ ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಅದಕ್ಕೆ ಒತ್ತಾಸೆಯಾಗಿ ನಾವೆಲ್ಲರೂ ಒಮ್ಮತದಿಂದ ಸಹಕರಿಸುತ್ತೇವೆ ಎಂದಿದ್ದಾರೆ.
ಪರಿಷತ್‌ನ ಕೇಂದ್ರ ಕಚೇರಿ ಸಿಬ್ಬಂದಿಗೆ ಸುಮಾರು ನಾಲ್ಕು ತಿಂಗಳ ವೇತನ ಬಿಡುಗಡೆ ಮಾಡಬೇಕು. ಪರಿಷತ್‌ನಲ್ಲಿ ನಡೆದಿದೆ ಎನ್ನಲಾದ ಆರ್ಥಿಕ ವ್ಯವಹಾರಗಳಿಗೆ ಕಾರ್ಯಕಾರಿ ಸಮಿತಿಯ ಎಲ್ಲ ಸದಸ್ಯರು ಹೊಣೆಗಾರರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಒಂದು ವೇಳೆ ಆರ್ಥಿಕ ಅವ್ಯವಹಾರಗಳು ನಡೆದಿದ್ದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರು ಹೊಣೆಗಾರರಲ್ಲ. ಈ ಸಂಬಂಧ ಈಗಾಗಲೇ ವಿಚಾರಣಾಧಿಕಾರಿಗಳು ನೀಡಿದ್ದ ನೋಟಿಸ್‌ಗೆ ಉತ್ತರ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.