ADVERTISEMENT

ಬೆಂಗಳೂರು: ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆ ಜಾರಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2025, 22:50 IST
Last Updated 31 ಅಕ್ಟೋಬರ್ 2025, 22:50 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ‘ಕನ್ನಡ ಶಾಲೆಗಳನ್ನು ಉಳಿಸಲು ‘ಕನ್ನಡ ಶಾಲೆಗಳ ಸಬಲೀಕರಣ ಕಾಯ್ದೆ’ ಜಾರಿ ಮಾಡಬೇಕು’ ಎಂದು ಅಖಿಲ ಕರ್ನಾಟಕ ಅನುದಾನರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ಆಗ್ರಹಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರೇವಣ ಸಿದ್ದಪ್ಪಾ ಜಲಾದೆ, ‘ಹತ್ತು ವರ್ಷಗಳ ಅವಧಿಯಲ್ಲಿ ಹಲವಾರು ಕನ್ನಡ ಶಾಲೆಗಳನ್ನು ರಾಜ್ಯದಲ್ಲಿ ಮುಚ್ಚಲಾಗಿದೆ. ಸರ್ಕಾರದ ಕಠಿಣ ನಿಯಮಗಳಿಂದಾಗಿ ಕನ್ನಡ ಶಾಲೆಗಳು ಸೊರಗುತ್ತಿವೆ. ತಾಯಿ ಭಾಷೆಯಾದ ಕನ್ನಡ ಉಳಿಯಬೇಕಾದರೆ ಕನ್ನಡ ಶಾಲೆಗಳ ಸಮಗ್ರ ವಿಕಾಸವಾಗಬೇಕು. ಇದು ಸರ್ಕಾರದ ಮುಖ್ಯ ಧ್ಯೇಯವಾಗಬೇಕು’ ಎಂದು ತಿಳಿಸಿದರು.

ADVERTISEMENT

‘ಸರ್ಕಾರದ ನಿರ್ಲಕ್ಷ್ಯದಿಂದ ಪ್ರತಿ ವರ್ಷ ಕನ್ನಡ ಶಾಲೆಗಳು ಮುಚ್ಚುತ್ತಿವೆ. ನೂರಾರು ನಿಯಮಗಳಿಂದ ಖಾಸಗಿ ಕನ್ನಡ ಶಾಲೆಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ. ಈ ಸಂಬಂಧ ಮುಖ್ಯಮಂತ್ರಿ, ಶಿಕ್ಷಣ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. 1995ರ ನಂತರ ಪ್ರಾರಂಭವಾದ ಖಾಸಗಿ ಶಾಲಾ–ಕಾಲೇಜುಗಳನ್ನು ಅನುದಾನಕ್ಕೊಳಪಡಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಕನ್ನಡ ಶಾಲೆಗಳನ್ನು ಪ್ರಾರಂಭಿಸಲು ಇರುವ ಷರತ್ತುಗಳನ್ನು ಸರಳಗೊಳಿಸಬೇಕು. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನವೀಕರಣ ಪ್ರಕ್ರಿಯೆ ಸುಲಭಗೊಳಿಸಬೇಕು. ಬಡ ಮಕ್ಕಳಿಗೆ ದಾರಿ ದೀಪವಾದ ‘ಆರ್‌ಟಿಇ’ ಖಾಸಗಿ ಶಾಲೆಗಳಿಗೆ ಮರು ಜಾರಿ ಮಾಡಬೇಕು. ಅನುದಾನಿತ ಶಾಲಾ-ಕಾಲೇಜುಗಳಲ್ಲಿನ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ರಾಜ್ಯದಾದ್ಯಂತ ಅನಧಿಕೃತ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಬೇಕು. ಕನ್ನಡ ಶಾಲೆಗಳನ್ನು ಮುಚ್ಚಿ, ಕರ್ನಾಟಕ ಪಬ್ಲಿಕ್ ಶಾಲೆ ಪ್ರಾರಂಭಿಸುತ್ತಿರುವುದನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡು ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಘೋಷಿಸಬೇಕು. ಇಲ್ಲದೇ ಹೋದರೆ ನವೆಂಬರ್‌ ಅಂತ್ಯದಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಎಂ.ಮೌಲಾಲಿ, ಡಿ.ಬಿ.ನದಾಫ್, ಕಾರ್ಯದರ್ಶಿ ಕೆ.ಗುರುನಾಥ ರೆಡ್ಡಿ, ರಾಜ್ಯ ಸಂಚಾಲಕ ಜೆ.ಸಿ. ಶಿವಪ್ಪ ಮಂಡ್ಯ, ಮಹಾಲಿಂಗನಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.