
ಬೆಂಗಳೂರು: ಸ್ತ್ರೀ ಶಕ್ತಿ ಸ್ವ ಸಹಾಯ ಗುಂಪುಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಕರ್ಮಣಿ ಉತ್ಸವ–2026’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಶುಕ್ರವಾರ ರಾಜಾಜಿನಗರದ ಶ್ರೀರಾಮಮಂದಿರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮೂರು ದಿನಗಳ ಉತ್ಸವವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಇದೇ ವೇಳೆ ಮಹಿಳಾ ಉದ್ಯಮಗಳ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ‘ಗೃಹ ಲಕ್ಷ್ಮೀ ಡಿಜಿಟಲ್ ಮಾರ್ಕೆಟಿಂಗ್ ಆ್ಯಪ್’ ಹಾಗೂ ಕರ್ಮಣಿ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಲಾಯಿತು.
ಡಿ.ಕೆ.ಶಿವಕುಮಾರ್ ಮಾತನಾಡಿ, ‘ಹೆಣ್ಣು ಕುಟುಂಬದ ಕಣ್ಣು ಎಂದು ಸರ್ಕಾರ ಭಾವಿಸಿ ಶಕ್ತಿ ತುಂಬುವ ಕೆಲಸ ಮಾಡಿದೆ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಅನೇಕ ಕಾರ್ಯಕ್ರಮ ರೂಪಿಸಲಾಗಿದೆ’ ಎಂದರು.
‘ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಹೊಸ ರೂಪ ನೀಡಲಾಗಿದೆ. ಬೆಂಗಳೂರು ನಗರ ಬೆಳೆಯುತ್ತಿದ್ದು, ಐ.ಟಿ. ಕ್ಷೇತ್ರದಲ್ಲಿ 25 ಲಕ್ಷ ಮಂದಿ ಕೆಲಸ ಮಾಡುತ್ತಿದ್ದಾರೆ. ಒಂದೂವರೆ ಲಕ್ಷ ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳು ನಗರದಲ್ಲಿ ನಡೆಯುತ್ತಿವೆ’ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ‘ಮಹಿಳೆಯರ ಆರ್ಥಿಕ ಸುಧಾರಣೆಗೆ ಗೃಹಲಕ್ಷ್ಮಿ ಡಿಜಿಟಲ್ ಮಾರ್ಕೆಟಿಂಗ್ ಅನುಕೂಲ ಆಗಲಿದೆ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
ಡಿಜಿಟಲ್ ಮಾರ್ಕೆಟಿಂಗ್ ಗ್ರಾಮಾಂತರ ಮಹಿಳೆಯರಿಗೆ ಅನುಕೂಲ ಆಗಲಿದೆ, ಮುಂದಿನ ದಿನಗಳಲ್ಲಿ ಆ್ಯಪ್ ಬಗ್ಗೆ ತಿಳಿಸಲು ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಎಂದರು.
ಮಹಿಳಾ ಸಬಲೀಕರಣಕ್ಕಾಗಿ ಕರ್ಮಣಿ ಉತ್ಸವ, ಗೃಹಲಕ್ಷ್ಮಿ ಡಿಜಿಟಲ್ ಅನಾವರಣ ಮಾಡಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ ಎಂದರು.
ಸಚಿವ ರಾಮಲಿಂಗಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ, ಚಿತ್ರನಟಿ ರಾಗಿಣಿ ದ್ವಿವೇದಿ, ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಬಾಬು, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಉಪಸ್ಥಿತರಿದ್ದರು.