
ಬೆಂಗಳೂರು: ‘ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳು, ವಸತಿ ಶಾಲೆ ಮತ್ತು ನಿಲಯಗಳಲ್ಲಿ ದಿನಪತ್ರಿಕೆ ಓದುವ ಆದೇಶವನ್ನು ಅನುಷ್ಠಾನಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಪ್ರತಿದಿನ ಕನಿಷ್ಠ 10–15 ನಿಮಿಷ ದಿನಪತ್ರಿಕೆಗಳನ್ನು ಓದುವುದರಿಂದ ಮಕ್ಕಳಲ್ಲಿ ಸಾಮಾನ್ಯ ಜ್ಞಾನ ವೃದ್ಧಿಯಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯ ಸಿದ್ಧತೆ, ಪ್ರಚಲಿತ ವಿದ್ಯಮಾನಗಳ ಅರಿವು ಮೂಡುತ್ತದೆ. ಶಬ್ದಕೋಶ, ಭಾಷಾ ಶೈಲಿ ಮತ್ತು ಬರವಣಿಗೆ ಕೌಶಲಗಳನ್ನು ರೂಢಿಸಿಕೊಳ್ಳಬಹುದು’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಇಂಟರ್‌ನೆಟ್ ಶಿಕ್ಷಣ, ಮನರಂಜನೆ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಗೆ ಹೆಚ್ಚು ಸಮಯ ನೀಡುತ್ತಿದ್ದಾರೆ. ಮೊಬೈಲ್ ಬಳಕೆ ಮಾಡುವುದರಿಂದ ಮಕ್ಕಳ ಜ್ಞಾಪಕ ಶಕ್ತಿಯ ಕೊರತೆ, ಶ್ರವಣದೋಷ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಆಸಕ್ತಿ ಇಲ್ಲದಿರುವ ಲಕ್ಷಣಗಳು ಕಂಡುಬರುತ್ತಿವೆ. ಆದ್ದರಿಂದ ರಾಜ್ಯದ ಎಲ್ಲ ಶಾಲಾ–ಕಾಲೇಜುಗಳಲ್ಲಿ ಕಡ್ಡಾಯವಾಗಿ ದಿನಪತ್ರಿಕೆ ಓದುವುದನ್ನು ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.