ADVERTISEMENT

ಬೆಂಗಳೂರು ಗಲಭೆ: ಪುಂಡರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2020, 11:10 IST
Last Updated 12 ಆಗಸ್ಟ್ 2020, 11:10 IST
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿರುವ ಹಿಂಸಾಚಾರಕ್ಕೆ ಕಾರಣರಾಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಡಿಜಿ ಮತ್ತು ಐಜಿಪಿ ಪ್ರವೀಣ್‌ ಸೂದ್‌ ಅವರಿಗೆ ಸೂಚಿಸಿದ್ದಾರೆ.

ಗಲಭೆ ನಡೆದ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಭದ್ರತೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಲು ಸೂಚಿಸಿದ್ದಾರೆ. ಮಂಗಳವಾರ ರಾತ್ರಿಯಿಂದ ನಡೆದ ಬೆಳವಣಿಗೆಗಳ ಕುರಿತು ಕರ್ನಾಟಕ ಪೊಲೀಸ್‌ ಮುಖ್ಯಸ್ಥ ಪ್ರವೀಣ್ ಸೂದ್‌ ಅವರು ಸಿಎಂ ಯಡಿಯೂರಪ್ಪ ಅವರಿಗೆ ಬುಧವಾರ ಬೆಳಿಗ್ಗೆ ವಿವರಿಸಿದ್ದಾರೆ.

ಪರಿಸ್ಥಿತಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅಗತ್ಯವಿರುವಷ್ಟು ಭದ್ರತೆ ನಿಯೋಜಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದು, ಸ್ಥಳೀಯ ಮುಸ್ಲಿಂ ಮುಖಂಡರೊಂದಿಗೆ ಮಾತುಕತೆ ನಡೆಸಲು ತಿಳಿಸಿದ್ದಾರೆ.

ADVERTISEMENT

ಬೆಂಗಳೂರು ಪೊಲೀಸ್‌ ಕಮಿಷರ್‌ ಕಮಲ್‌ ಪಂತ್‌ ಸಹ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಪರಿಸ್ಥಿತಿಯ ಕುರಿತು ಇಂದು ಬೆಳಿಗ್ಗೆ ವಿವರಿಸಿದ್ದಾರೆ.

ಪುಲಕೇಶಿನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್‌ ಠಾಣೆಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆ ಸಂಬಂಧ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ ಪೊಲೀಸರು, 110 ಮಂದಿಯನ್ನು ಬಂಧಿಸಿದ್ದಾರೆ. ಗಲಭೆ ಸೃಷ್ಟಿಸಿ ವಾಹನಗಳಿಗೆ ಬೆಂಕಿ ಹಚ್ಚಿ, ಪೊಲೀಸರ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳ ಪತ್ತೆಗೆ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು

ಇನ್ನಷ್ಟು ಓದು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.