
ಮಳೆ
ಮೆಟಾ ಎಐ ಚಿತ್ರ
ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರ ಮತ್ತು ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸೋಮವಾರ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಈ ಜಿಲ್ಲೆಗಳ ಕೆಲವೆಡೆ ನಿರಂತರ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಂಭವವಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡದಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಯ ಕೆಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ.
ಕರಾವಳಿಯ ಎಲ್ಲ ಹಾಗೂ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಒಂದು ವಾರ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡದಲ್ಲಿ ಮುಂದುವರಿದ ಮಳೆ
ಹುಬ್ಬಳ್ಳಿ: ಭಾನುವಾರ ಧಾರವಾಡ ಜಿಲ್ಲೆಯ ವಿವಿಧೆಡೆ ಸಾಧಾರಣ ಮತ್ತು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾನುವಾರವೂ ಉತ್ತಮ ಮಳೆಯಾಗಿದೆ. ಕರಾವಳಿ ಭಾಗ ದಲ್ಲಿ ಗಾಳಿ ಸಹಿತ ಮಳೆ ಸುರಿದಿದ್ದರೆ, ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಆಗಾಗ ಸಾಧಾರಣ ಮಳೆ ಸುರಿದಿದೆ. ಶನಿವಾರದಿಂದ ಭಾನುವಾರ ನಸುಕಿನ ಜಾವದವರೆಗೆ ಹೊನ್ನಾವರ ತಾಲ್ಲೂಕಿನ ಕಾಸರಕೋಡದಲ್ಲಿ 9.1 ಸೆಂ.ಮೀ, ಭಟ್ಕಳ ಮತ್ತು ಹೊನ್ನಾವರದ ವಿವಿಧೆಡೆ 8 ಸೆಂ.ಮೀ ಮಳೆ ಸುರಿದಿದೆ. ಮಳೆ ಪರಿಣಾಮ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ. ಫಸಲು ಕಟಾವಿಗೆ ಬರುವ ಸಮಯದಲ್ಲೇ ಮಳೆ ಸುರಿಯುತ್ತಿರುವುದು ರೈತರಲ್ಲಿ ಆತಂಕ ಉಂಟುಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.