ADVERTISEMENT

ಕೆಪಿಎಸ್‌ಸಿ: ನೇಮಕಾತಿ ಪ್ರಕ್ರಿಯೆ ಮುಂದುವರಿಕೆಗೆ ಹೈಕೋರ್ಟ್‌ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2025, 15:23 IST
Last Updated 4 ಆಗಸ್ಟ್ 2025, 15:23 IST
<div class="paragraphs"><p>ಕೆಪಿಎಸ್‌ಸಿ </p></div>

ಕೆಪಿಎಸ್‌ಸಿ

   

ಬೆಂಗಳೂರು: ‘ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು ನಿಯಮ ಉಲ್ಲಂಘನೆ ಮಾಡಲಾಗಿದೆ’ ಎಂದು 348 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಅಧಿಸೂಚನೆ ರದ್ದುಗೊಳಿಸಿದ್ದ ಕೆಎಟಿ ಆದೇಶವನ್ನು ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆ ನಡೆಸಿರುವ ಹೈಕೋರ್ಟ್‌, ನೇಮಕಾತಿ ಪ್ರಕ್ರಿಯೆ ಮುಂದುವರಿಕೆಗೆ ಸಮ್ಮತಿಸಿದೆ.

ಕಳೆದ ಮೇ 28ರಂದು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಕುರಿತಂತೆ ಮಧ್ಯಂತರ ಆದೇಶ ಹೊರಡಿಸಿದೆ.

ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕೆಪಿಎಸ್‌ಸಿಗೆ ಅನುಮತಿ ನೀಡಿರುವ ನ್ಯಾಯಪೀಠ, ‘ಆಯ್ಕೆ ಪಟ್ಟಿಯ ಫಲಿತಾಂಶವನ್ನು ನ್ಯಾಯಾಲಯದ ಅನುಮತಿ ಇಲ್ಲದೆ ಪ್ರಕಟಿಸುವಂತಿಲ್ಲ’ ಎಂದು ಮಧ್ಯಂತರ ಆದೇಶದಲ್ಲಿ ವಿವರಿಸಿದೆ.

ADVERTISEMENT

ಮೂಲ ಅರ್ಜಿದಾರರಾದ ಬಿ.ಎನ್‌.ಮಧು, ಕರ್ನಾಟಕ ಲೋಕಸೇವಾ ಆಯೋಗ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿ ಐದು ವಾರಗಳ ಕಾಲ ವಿಚಾರಣೆ ಮುಂದೂಡಿದೆ.

‘ಪ್ರತಿವಾದಿಗಳು ಸಲ್ಲಿಸುವ ಆಕ್ಷೇಪಣೆಗೆ ಸರ್ಕಾರದ ಪ್ರತಿ ಆಕ್ಷೇಪಣೆ ಏನಾದರೂ ಇದ್ದರೆ ಅದನ್ನು ಒಂದು ವಾರದಲ್ಲಿ ಸಲ್ಲಿಸಬೇಕು’ ಎಂದು ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.