ADVERTISEMENT

ಕರ್ತವ್ಯಕ್ಕೆ ಅಡ್ಡಿ: ಕೆಆರ್‌ಎಸ್‌ ಪಕ್ಷದ ಮುಖಂಡರ ವಿರುದ್ಧ ಎಫ್‌ಐಆರ್‌ಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2026, 14:40 IST
Last Updated 23 ಜನವರಿ 2026, 14:40 IST
<div class="paragraphs"><p>ಎಫ್‌ಐಆರ್</p></div>

ಎಫ್‌ಐಆರ್

   

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕೆಲಸಕ್ಕೆ ಅಡ್ಡಿ ಪಡಿಸುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ವಿರುದ್ಧ ರಾಜ್ಯದಾದ್ಯಂತ ಎಫ್‌ಐಆರ್ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಆದೇಶಿಸಿದ್ದಾರೆ.

ಸಾರ್ವಜನಿಕವಾಗಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವುದು, ಸನ್ಮಾನದ ನೆಪದಲ್ಲಿ ಮಾನಹಾನಿ ಮಾಡುತ್ತಿರುವ ಘಟನೆಗಳು ನಡೆದಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ADVERTISEMENT

ಚನ್ನಪಟ್ಟಣದ ಇನ್‌ಸ್ಪೆಕ್ಟರ್‌ ಜತೆಗೆ ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಇತ್ತೀಚೆಗೆ ಗಲಾಟೆ ಮಾಡಿದ್ದರು. ಏಕಮುಖ ಸಂಚಾರ ಮಾರ್ಗದಲ್ಲಿ ಬಸ್ ತಂದು ನಿಯಮ ಉಲ್ಲಂಘಿಸಿದ್ದಲ್ಲದೆ, ಅದನ್ನು ಪ್ರಶ್ನಿಸಿದ ಪೊಲೀಸರೊಂದಿಗೆ ಗಲಾಟೆ ನಡೆಸಿದ್ದರು ಎಂಬ ಆರೋಪವಿದೆ.

ಈ ಸಂಬಂಧ ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್‌.ಪಿ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಈ ಘಟನೆ ಆಧರಿಸಿ, ರಾಜ್ಯದ ಪೊಲೀಸರಿಗೆ ಸೂಚನೆ ರವಾನಿಸಲಾಗಿದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೂ ಈ ಕುರಿತು ಆದೇಶ ಹೊರಡಿಸುವಂತೆ ಮನವಿ ಮಾಡಲಾಗಿದೆ. 

ಕೆಆರ್‌ಎಸ್‌ ಪಕ್ಷದ ಆಕ್ರೋಶ: ಭ್ರಷ್ಟ ಅಧಿಕಾರಿಗಳನ್ನು ಪ್ರಶ್ನೆ ಮಾಡಿದರೆ ಸರ್ಕಾರಿ ಕೆಲಸಕ್ಕೆ ಅಡ್ಡಿಯ ನೆಪವೊಡ್ಡಿ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಇದು ಯಾವ ನ್ಯಾಯ? ಹಾಗಿದ್ದರೆ ಭ್ರಷ್ಟಾಚಾರ ನಡೆಸುವ ಅಧಿಕಾರಿಗಳನ್ನು ಪ್ರಶ್ನಿಸಬಾರದೇ ಎಂದು ಕೆಆರ್‌ಎಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.

‘ಕೆಆರ್‌ಎಸ್‌ ಪಕ್ಷದ ಕಾರ್ಯಕರ್ತರು ಯಾವುದಕ್ಕೂ ಹೆದರುವ ಅಗತ್ಯವಿಲ್ಲ. ಹೆದರುವುದೂ ಇಲ್ಲ’ ಎಂದು ಪಕ್ಷದ ರಾಜ್ಯ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.