ADVERTISEMENT

ಕಾನೂನು ವಿವಿ ಪ್ರಾದೇಶಿಕ ಕಚೇರಿ ಮೈಸೂರಿನಲ್ಲಿ ಸ್ಥಾಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 20:01 IST
Last Updated 31 ಡಿಸೆಂಬರ್ 2025, 20:01 IST
ಕಾನೂನು ವಿವಿ ಲೋಗೋ
ಕಾನೂನು ವಿವಿ ಲೋಗೋ   

ಬೆಂಗಳೂರು: ‘ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ಕಚೇರಿಯನ್ನು ಮೈಸೂರಿನಲ್ಲಿ ಸ್ಥಾಪಿಸಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾನೂನು ಸಚಿವ ಎಚ್‌.ಕೆ. ಪಾಟೀಲ ಅವರಿಗೆ ವಿಧಾನ ಪರಿಷತ್‌ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದಾರೆ.

ಕಾನೂನು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 176 ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಈ ಕಾಲೇಜುಗಳಲ್ಲಿ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೂರು ವರ್ಷ ಹಾಗೂ ಐದು ವರ್ಷಗಳ ಅವಧಿಯ ಪಠ್ಯಕ್ರಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಈ ಪೈಕಿ, ಅರ್ಧದಷ್ಟು ಕಾಲೇಜುಗಳು ಮೈಸೂರು, ಬೆಂಗಳೂರು, ಮಂಡ್ಯ, ಹಾಸನ ಮತ್ತು ಚಾಮರಾಜನಗರ ಸೇರಿದಂತೆ ಹಳೆ ಮೈಸೂರು ಪ್ರಾಂತ್ಯದ ಭಾಗದಲ್ಲಿವೆ. ಶೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಭಾಗದವರೇ ಆಗಿದ್ದಾರೆ. ಇವರೆಲ್ಲರೂ ಶೈಕ್ಷಣಿಕ ದಾಖಲಾತಿ, ಅಂಕಪಟ್ಟಿ, ಇತರೆ ಆಡಳಿತಾತ್ಮಕ ಕೆಲಸಗಳಿಗಾಗಿ ಪ್ರತಿ ಬಾರಿಯೂ ದೂರದ ಹುಬ್ಬಳ್ಳಿಗೆ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

‘ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ಆರ್ಥಿಕ ಹೊರೆ ಹಾಗೂ ಸಮಯ ಸದುಪಯೋಗ ಮಾಡಿಕೊಳ್ಳುವ ಉದ್ದೇಶದಿಂದ ಕಾನೂನು ವಿಶ್ವವಿದ್ಯಾಲಯದ ಪ್ರಾದೇಶಿಕ ವಲಯ ಕಚೇರಿಯನ್ನು ಮೈಸೂರಿನಲ್ಲಿ ಸ್ಥಾಪಿಸುವುದು ಸೂಕ್ತವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಸರಳ ಆಡಳಿತಾತ್ಮಕ ಕ್ರಮಕ್ಕಾಗಿ ಪ್ರಾದೇಶಿಕ ಕಚೇರಿಯನ್ನು ಆರಂಭಿಸಲು ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಮನವಿ ಮಾಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.