ಬೆಂಗಳೂರು: ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಒಳಪಂಗಡಗಳ ಕುಲಶಾಸ್ತ್ರೀಯ ಅಧ್ಯಯನಕ್ಕೆ ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶನಿವಾರ ಆಯೋಜಿಸಿದ್ದ ಶ್ರೀಕೃಷ್ಣ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಈ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕಾಡುಗೊಲ್ಲ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದಲ್ಲಿ 46 ಒಳಪಂಗಡಗಳಿವೆ. ಹೀಗಾಗಿ ಕುಲಶಾಸ್ತ್ರೀಯ ಅಧ್ಯಯನ ಅಗತ್ಯವಿದೆ ಎಂದರು.
ಈ ಬಾರಿ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ ಗಂಗಾಕಲ್ಯಾಣ, ನೇರ ಸಾಲ ಮತ್ತು ಸಾರಥಿ ಯೋಜನೆಗೆ ₹45 ಕೋಟಿ ಅನುದಾನ ಮೀಸಲಿಡಲಾಗಿದೆ. ಸಮುದಾಯದ ಮೂಲಸೌಲಭ್ಯ ಅಭಿವೃದ್ಧಿಗೆ ₹100 ಕೋಟಿ ಅನುದಾನ ಹಾಗೂ ವಾಸಕ್ಕೆ ಮನೆ ಇಲ್ಲದವರಿಗೆ ಮನೆ ನಿರ್ಮಾಣ ಮಾಡಿಕೊಡಲು ₹15 ಕೋಟಿ ಮೀಸಲಿಡಲಾಗಿದೆ. ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ₹64 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಸಚಿವರು ವಿವರಿಸಿದರು.
ಕಾಡುಗೊಲ್ಲ ಸಮುದಾಯ ಭವನ ನಿರ್ಮಾಣಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅನುದಾನ ಒದಗಿಸಲಾಗುವುದು ಎಂದರು.
ಗೊಲ್ಲ ಯಾದವ ಸಂಘದ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ನೆಫ್ರೊ ಮತ್ತು ಯುರಾಲಜಿ ಸಂಸ್ಥೆಯ ನಿರ್ದೇಶಕ ಡಾ. ಶಿವಲಿಂಗಯ್ಯ, ಬಿಬಿಎಂಪಿ ಮಾಜಿ ಸದಸ್ಯ ಮೋಹನ್, ಎಂ.ಎನ್. ವೆಂಕಟೇಶ್, ಇಲಾಖೆ ನಿರ್ದೇಶಕಿ ಕೆ.ಎಂ. ಗಾಯಿತ್ರಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.