
ಬೆಂಗಳೂರಿನಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಶಿಕ್ಷಣ ದಿನ ಕಾರ್ಯಕ್ರಮದಲ್ಲಿ ರಿಜ್ವಾನ್ ಅರ್ಷದ್, ಮಧು ಬಂಗಾರಪ್ಪ, ಬಿ.ಝೆಡ್. ಜಮೀರ್ ಅಹಮದ್ ಖಾನ್, ನಸೀರ್ ಅಹ್ಮದ್ ಭಾಗವಹಿಸಿದ್ದರು
ಪ್ರಜಾವಾಣಿ ಚಿತ್ರ
ಬೆಂಗಳೂರು: ‘ರಾಜ್ಯದ ಆರು ಸಾವಿರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತಲಾ ಒಂದರಂತೆ ಆರು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು (ಕೆಪಿಎಸ್) ತೆರೆಯುವ ಚಿಂತನೆ ಇದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಡಾ. ಅಬುಲ್ ಕಲಾಂ ಆಜಾದ್ ಅವರ ಜನ್ಮ ದಿನದ ಅಂಗವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮಂಗಳವಾರ ಆಯೋಜಿಸಿದ್ದ ‘ರಾಷ್ಟ್ರೀಯ ಶಿಕ್ಷಣ ದಿನ’ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಪ್ರಸ್ತುತ 308 ಕೆಪಿಎಸ್ ಶಾಲೆಗಳಿವೆ. ಬಜೆಟ್‌ನಲ್ಲಿ ಘೋಷಿಸಿದ 500 ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ನೆರವಿನಲ್ಲಿ 200 ಶಾಲೆ ಹಾಗೂ ಗಣಿಭಾದಿತ 10 ತಾಲ್ಲೂಕುಗಳಿಗೆ ತಲಾ 10ರಂತೆ 100 ಶಾಲೆಗಳನ್ನು ತೆರೆಯಲಾಗುತ್ತಿದೆ. ಅಲ್ಪಸಂಖ್ಯಾತ ಇಲಾಖೆಯಿಂದ 100 ಶಾಲೆ. ಹೀಗೆ, ಒಂದೇ ವರ್ಷದಲ್ಲಿ ಒಟ್ಟು 900 ಹೊಸ ಶಾಲೆಗಳನ್ನು ಆರಂಭಿಸಲಾಗುತ್ತದೆ. ಈ ಶಾಲೆಗಳಲ್ಲಿ ಒಂದನೇ ತರಗತಿಯಲ್ಲಿ ಕಂಪ್ಯೂಟರ್ ಶಿಕ್ಷಣ ಹಾಗೂ ಆರನೇ ತರಗತಿಯಲ್ಲಿ ಕೌಶಲ ಅಭಿವೃದ್ಧಿ ತರಬೇತಿ ನೀಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.
‘ಕೆಪಿಎಸ್ ಶಾಲೆಯಲ್ಲಿ ಎಲ್‌ಕೆಜಿಗೆಯಿಂದ ಪಿಯುಸಿವರೆಗೂ ವಿದ್ಯಾಭ್ಯಾಸ ಮಾಡಬಹುದು. ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲು ದ್ವಿಭಾಷಾ ಮಾಧ್ಯಮದ ಕಲಿಕೆಗೆ ಅವಕಾಶ ನೀಡಲಾಗಿದೆ. ಆರನೇ ತರಗತಿಯಿಂದ ವಿದ್ಯಾರ್ಥಿಗಳು ಕನ್ನಡ, ಇಂಗ್ಲಿಷ್ ಭಾಷಾ ಮಾಧ್ಯಮ ಆಯ್ಕೆ ಮಾಡಿಕೊಳ್ಳಬಹುದು’ ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಝೆಡ್. ಜಮೀರ್ ಅಹಮದ್ ಖಾನ್ ಮಾತನಾಡಿ, ‘ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳನ್ನು ನಾವು ಸ್ಮರಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಹಾದಿಯಲ್ಲಿ ಸಾಗಬೇಕು. ನಮ್ಮ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ’ ಎಂದು ಹೇಳಿದರು.
ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿ, ‘ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಮೌಲಾನಾ ಅಬುಲ್ ಕಲಾಂ ಆಜಾದ್ ಅವರನ್ನು ಕೆಲವು ಕೋಮುವಾದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವಿದ್ಯಾವಂತರಲ್ಲ ಎಂದು ಬಿಂಬಿಸುತ್ತಿರುವುದು ಖಂಡನೀಯ. ಈ ಕೋಮುವಾದಿಗಳು ಓದಿದ ಶಾಲಾ–ಕಾಲೇಜುಗಳು, ವಿಶ್ವವಿದ್ಯಾಲಯಗಳು, ಐಐಟಿಗಳಿಗೆ ಇದೇ ಮೌಲಾನಾ ಅವರು ಬುನಾದಿ ಹಾಕಿದ್ದರು’ ಎಂದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಅಂಕಣಕಾರ ಎ.ನಾರಾಯಣ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ. ಅಲ್ತಾಫ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.