ADVERTISEMENT

Karnataka Rains | 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

​ಪ್ರಜಾವಾಣಿ ವಾರ್ತೆ
Published 25 ಜುಲೈ 2023, 15:38 IST
Last Updated 25 ಜುಲೈ 2023, 15:38 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರವೂ ಮಳೆಯಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 6 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. 

ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ ಹಾಗೂ ಹಾಸನ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. 

ಕರಾವಳಿಯಲ್ಲಿ ಬಿರುಗಾಳಿಯ ವೇಗವು ಗಂಟೆಗೆ 40–45 ಕಿ.ಮೀ.ನಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಸೂಚಿಸಿದೆ. 

ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. 

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಗುಡುಗು ಸಹಿತ ಭಾರಿ ಮಳೆ ಮುಂದುವರಿಯಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ಮಳೆ ಅಬ್ಬರ ಮುಂದುವರಿಯಲಿದ್ದು, ಬಳಿಕ ತೀವ್ರತೆ ತಗ್ಗಲಿದೆ ಎಂದು ಇಲಾಖೆ ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.