
ಬೆಂಗಳೂರು: ‘ಪರಿಶಿಷ್ಟ ಜಾತಿ ಯವರಿಗೆ ಒಳ ಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ನಮ್ಮ ಸರ್ಕಾರ ಬಿಡುವುದಿಲ್ಲ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭಾನುವಾರ ಆಯೋಜಿಸಿದ್ದ ಸಂತ ಸೇವಾಲಾಲ್ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಣ್ಣ ಸಮುದಾಯಗಳ ಬಗ್ಗೆ ಅಪಾರವಾದ ಕಾಳಜಿ ಇದೆ. ಆದ್ದರಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗುವುದಿಲ್ಲ. ಈ ಬಗ್ಗೆ ಯಾರೂ ಹೆದರುವ ಅಗತ್ಯವಿಲ್ಲ’ ಎಂದು ಭರವಸೆ ನೀಡಿದರು.
‘ರಾಜ್ಯದಲ್ಲಿ ಇರುವ ಪ್ರತಿಯೊಂದುತಾಂಡಾವನ್ನು ಕಂದಾಯ ಗ್ರಾಮ ಮಾಡಲು ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಕೆಲಸಗಳನ್ನು ಪ್ರಾರಂಭಿಸ ಲಾಗಿದೆ. ಹತ್ತಾರು ವರ್ಷಗಳಿಂದ ತಾಂಡಾದಲ್ಲಿ ವಾಸಿಸುತ್ತಿರುವವರಿಗೆ ಹಕ್ಕುಪತ್ರಗಳನ್ನು ವಿತರಿಸಲಾಗುತ್ತಿದೆ’ ಎಂದರು.
‘ಸಾಧು-ಸಂತರ ಸಾಲಿನಲ್ಲಿ ಸೇವಾಲಾಲ್ ಅವರು ಅಗ್ರಪಂಕ್ತಿಯಲ್ಲಿ ನಿಲ್ಲುತ್ತಾರೆ. ಅಂದಿನ ಕಾಲದಲ್ಲೇ ಸಮುದಾಯದ ಅಭಿವೃದ್ಧಿಗಾಗಿ ದುಡಿದ ಸೇವಾಲಾಲ್ ಅವರು, ಜನತೆಗೆ ವ್ಯಸನಮುಕ್ತರಾಗಿ ಎಂದು ಬೋಧಿಸುತ್ತಾ, ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿ ಮಾತುಗಳನ್ನು ಹೇಳಿದ್ದರು’ ಎಂದು ಸ್ಮರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.