ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ. ಸಿದ್ದಲಿಂಗಯ್ಯ ಸಾಹಿತ್ಯ ದತ್ತಿ ಪ್ರಶಸ್ತಿ’ಗೆ ಜನಪದ ಗಾಯಕ ಎಚ್.ಜನಾರ್ದನ (ಜನ್ನಿ) ಮತ್ತು ಸಾಹಿತಿ ಶೂದ್ರ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ.
ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಆಯ್ಕೆ ಸಮಿತಿ ಕ್ರಮವಾಗಿ 2024 ಮತ್ತು 2025ನೇ ಸಾಲಿಗೆ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ.
ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿದ್ದ ಕವಿ ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಈ ಸಾಹಿತ್ಯ ದತ್ತಿ ಪುರಸ್ಕಾರ ಸ್ಥಾಪಿಸಲಾಗಿದೆ. ಸಿದ್ದಲಿಂಗಯ್ಯ ಅವರ ತಾತ್ವಿಕತೆಯನ್ನು ಸಮರ್ಥವಾಗಿ ವಿವಿಧ ಮಾಧ್ಯಮಗಳ ಮೂಲಕ ಬಿಂಬಿಸುತ್ತಿರುವ ಸಾಧಕರಿಗೆ ಈ ಪುರಸ್ಕಾರ ನೀಡಲಾಗುತ್ತಿದೆ.
ಇದೇ 18ರಂದು ಬೆಳಿಗ್ಗೆ 11.30ಕ್ಕೆ ಶ್ರವಣಬೆಳಗೊಳದ ಚಾವುಂಡರಾಯ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.